

ಸರಗೂರು: ಜಗಜ್ಯೋತಿ ಬಸವಣ್ಣ ಭಕ್ತಿ ಭಂಡಾರಿ, ವಿಶ್ವಗುರು. ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತರಲು ಬಯಸಿ, ಜನರಲ್ಲಿ ಜ್ಞಾನದ ದೀವಿಗೆ ಹಚ್ಚಿದ ಮಹಾನ್ ಮಾನವತಾವಾದಿ ಎಂದು ತಹಸೀಲ್ದಾರ್ ಮೋಹನಕುಮಾರಿ ಬಣ್ಣಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬಸವಣ್ಣ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕದ ಪಾಲಿಗೆ ಹನ್ನೆರಡನೇ ಶತಮಾನ ಎಂಬುದು ಬಹಳ ಮಹತ್ವದ್ದು. ಸಮಾಜದಲ್ಲಿ ಬಹುದೊಡ್ಡ ಬದಲಾವಣೆಯ ಹೊಸ ಚಿಂತನೆ ರೂಪುಗೊಂಡ ಕಾಲವದು. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಇತಿಹಾಸದಲ್ಲಿ ವಿಶಿಷ್ಟವಾದ ಕಾಲಘಟ್ಟ ಅದು ಎಂದರು.
ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದ ಈ ಕಾಲದಲ್ಲಿ ವಚನಕಾರರು ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಬದಲಾವಣೆಯನ್ನು ತರಲು ಪ್ರಯತ್ನಿಸಿದ್ದರು ಎಂದು ತಿಳಿಸಿದರು.
ಜೆಎಸ್‌ಎಸ್ ಉಪನ್ಯಾಸಕ ಸಿದ್ದಲಿಂಗಸ್ವಾಮಿ ಮಾತನಾಡಿ, ಜಾತಿಯ ಹಂಗಿಲ್ಲದೆ ಎಲ್ಲ ವರ್ಗದ ವಚನಕಾರರು ವಚನಗಳ ಮೂಲಕ ತಮ್ಮ ಹೊಸ ಚಿಂತನೆಗಳನ್ನು ಕಟ್ಟಿಕೊಡುತ್ತಿದ್ದರು. ಈ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಇವರು ಮಾಡುತ್ತಿದ್ದರು ಎಂದು ಹೇಳಿದರು.
ದಡದಹಳ್ಳಿ ಮಠಾಧೀಶರಾದ ಶ್ರೀ ಡಾ.ಷಡಕ್ಷರಿ ಅವರು ಬಸವಣ್ಣ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸುವ ಜತೆಗೆ ಅವರ ತತ್ವಾದರ್ಶಗಳನ್ನು ಎಲ್ಲರೂ ತಮ್ಮ ಬದುಕಿನಲ್ಲೂ ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಅದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ಹಂಚಿಪುರ ಕಿರಿಯ ತೋಂಟದಾರ್ಯ ಸ್ವಾಮೀಜಿ ಮಾತನಾಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ವೀರಭದ್ರಪ್ಪ, ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ಶಿವಕುಮಾರ್, ಪಪಂ ಸದಸ್ಯ ಚೆಲುವಕೃಷ್ಣ, ನಾಯಕ ಸಮಾಜದ ತಾಲೂಕು ಅಧ್ಯಕ್ಷ ಶಂಭುಲಿಂಗನಾಯಕ, ಬಸವ ಬಳಗ ಅಧ್ಯಕ್ಷ ಹಂಚೀಪುರ ಗಣಪತಿ, ಯುವ ಬಳಗದ ಅಧ್ಯಕ್ಷ ಪಿ.ನಂದೀಶ್, ದಸಂಸ ಮುಖಂಡ ಇಟ್ನ ರಾಜಣ್ಣ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಮುಖಂಡ ಸಿ.ಕೆ.ಗಿರೀಶ್, ಗ್ರಾಮೀಣ ಮಹೇಶ್, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಯೋಗೇಶ್, ಸಿದ್ದಪ್ಪ, ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಪಿಎಸ್‌ಐ ಗೋಪಾಲ್, ಇಒ ಪ್ರೇಮ್ ಕುಮಾರ್, ಗುರುಸ್ವಾಮಿ, ಪರಶಿವಮೂರ್ತಿ, ಡಿ.ಪಿ.ಮಹೇಶ್, ಸಮಾಜದ ಮುಖಂಡರು ಹಾಜರಿದ್ದರು.