ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಸೂಕ್ತ

8 ckm 1
ಚಿಕ್ಕಮಗಳೂರಲ್ಲಿ ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದವರಿಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಉದ್ಘಾಟಿಸಿದರು. ಬಸವರಾಜ್, ಪ್ರಶಾಂತ್, ಲೋಕೇಶ್ ಇತರರಿದ್ದರು.
Published on

ಚಿಕ್ಕಮಗಳೂರು: ಬೀದಿ ಬದಿ ವ್ಯಾಪಾರಸ್ಥರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗೆಯೇ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಡೆಗೆ ಗಮನ ನೀಡಬೇಕು ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಗರಸಭೆ, ಜಿಲ್ಲಾಸ್ಪತ್ರೆಯಿಂದ ಬೀದಿ ಬದಿ ವ್ಯಾಪಾರಿಗಳು ಹಾಗೂ ಅವರ ಕುಟುಂಬದವರಿಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಬೀದಿ ಬದಿ ವ್ಯಾಪಾರಸ್ಥರು ವರ್ಷಕ್ಕೆ ಒಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ನಗರಸಭೆ ಆಯುಕ್ತ ಬಸವರಾಜ್ ಮಾತನಾಡಿ, ಬೀದಿ ಬದಿ ವ್ಯಾಪಾರಸ್ಥರು ಗ್ರಾಹಕರಿಗೆ ಗುಣಮಟ್ಟದ ಆಹಾರ ನೀಡಬೇಕು. ಸುತ್ತಮುತ್ತಲಿನ ಪರಿಸರವನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಯಾವ ಕಾರಣಕ್ಕೂ ಪ್ಲಾಸ್ಟಿಕ್ ಬಳಸಬಾರದು ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆ ಸರ್ಜನ್ ಡಾ. ಮೋಹನ್ ಮಾತನಾಡಿ, ಪ್ರತಿಯೊಬ್ಬರೂ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಕೊಂಡು ಉತ್ತಮ ಆರೋಗ್ಯ ಹೊಂದಬೇಕು. ಸಣ್ಣ ಸಮಸ್ಯೆ ಇದ್ದರೂ ತಕ್ಷಣವೇ ಆಸ್ಪತ್ರೆಗೆ ಆಗಮಿಸಿ ವೈದ್ಯರಿಂದ ಸೂಕ್ತ ಸಲಹೆ ಪಡೆದಾಗ ಯಾವ ಸಮಸ್ಯೆಯೂ ಆಗುವುದಿಲ್ಲ ಎಂದರು.
ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಪ್ರಶಾಂತ್, ನಗರಸಭೆ ಎಇಇ ಲೋಕೇಶ್, ಯೋಜನೆಯ ಸಿಎಂಎಂ ಹರ್ಷ, ಸಿಎಂಒ ಕಲಾವತಿ, ಸಿಇಒ ಚಂದ್ರಶೇಖರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net