

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 48 ಗಂಟೆ ಮತ್ತಷ್ಟು ಚುರುಕಾಗಲಿದೆ.
ನೆರೆಯ ತಮಿಳುನಾಡಿನಲ್ಲಿ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನ.11 ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಮುಂದಿನ 48 ಗಂಟೆ ಹಾಗೂ ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.