ಹನೂರು: ಪಟ್ಟಣದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಆಗಾಗ್ಗೆ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದು ಒಂದೆಡೆಯಾದರೆ, ಶುಕ್ರವಾರ ಅಜ್ಜೀಪುರಕ್ಕೆ ತೆರಳುವ ಅರಕನಹಳ್ಳದ ರಸ್ತೆ ಬದಿ ಕಾಡಾನೆಗಳ ಹಿಂಡು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿತು.
ಕಳೆದ 2 ತಿಂಗಳಿನಿಂದೀಚೆಗೆ ಕಾಡಾನೆಗಳ ಹಿಂಡು ಆಗಾಗ್ಗೆ ಮ.ಬೆಟ್ಟಕ್ಕೆ ತೆರಳುವ ಮಾರ್ಗದ ರಸ್ತೆ ಬದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭಕ್ತರಲ್ಲಿ ಆತಂಕ ಉಂಟುಮಾಡುತ್ತಿವೆ. ಶುಕ್ರವಾರ ಕಾಡಾನೆಗಳ ಹಿಂಡು ಅಜ್ಜೀಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಅರಕನಹಳ್ಳದ ಬಳಿಯ ರಸ್ತೆ ಬದಿಯಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಉಂಟುಮಾಡಿತು. ಈ ವೇಳೆ ಕೆಲವರು ಕುತೂಹಲದಿಂದ ವೀಕ್ಷಿಸಿ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ರಸ್ತೆ ಬದಿಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕಾಡಾನೆಗಳು ಹೆಚ್ಚು ಆಗಮಿಸುವ ಅರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಅಗತ್ಯ ಸಿಬ್ಬಂದಿ ನಿಯೋಜಿಸುವುದರ ಮೂಲಕ ಕಾಡಾನೆಗಳು ರಸ್ತೆಗೆ ಆಗಮಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.