ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಆತ್ಮಹತ್ಯೆಗೆ ಶರಣು

Crime Logo
Published on

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದ ತಾಯಿ ಗಂಗಾದೇವಿ (೩೦) ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಾಲಹಳ್ಳಿಯ ಭೋವಿ ಕಾಲೊನಿಯಲ್ಲಿ ವಾಸವಿದ್ದ ಗಂಗಾದೇವಿ, ಮಾ. ೯ರಂದು ರಾತ್ರಿ ತಮ್ಮ ಮಕ್ಕಳಾದ ಲಕ್ಷ್ಮಿ (೭) ಹಾಗೂ ಗೌತಮ್‌ನನ್ನು (೯) ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಮರುದಿನ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಶರಣಾಗಿದ್ದರು.

ಗಂಗಾದೇವಿ ಅವರನ್ನು ಬಂಧಿಸಿದ್ದ ಜಾಲಹಳ್ಳಿ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಅಂದಿನಿಂದ ಗಂಗಾದೇವಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಗಂಗಾದೇವಿ ಗುರುವಾರ ರಾತ್ರಿ ಶೌಚಾಲಯಕ್ಕೆ ಹೋಗಿದ್ದರು. ಅಲ್ಲಿಯೇ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹ ನೋಡಿದ್ದ ಸಹ ಕೈದಿಗಳು ಜೈಲಿನ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬಳಿಕ, ಜೈಲಿಗೆ ಹೋಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಲಿನಲ್ಲಿದ್ದ ಪತಿ: ಆಂಧ್ರಪ್ರದೇಶ ಗಂಗಾದೇವಿ, ನರೇಶ್ ಎಂಬುವವರನ್ನು ೧೦ ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಪುತ್ರಿಯ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾರಣಕ್ಕೆ ಪತಿ ವಿರುದ್ಧವೇ ಗಂಗಾದೇವಿ ಪೊಲೀಸರಿಗೆ ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ) ಕಾಯ್ದೆಯಡಿ ನರೇಶ್‌ನನ್ನು ಬಂಧಿಸಲಾಗಿತ್ತು. ಸದ್ಯ ಈತನೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net