

ಸೊರಬ: ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸೇವನೆ ಕುರಿತು ಜಾಗೃತಿ ಮೂಡಿಸುವುದು ಅವಶ್ಯ ಎಂದು ತಹಸೀಲ್ದಾರ್ ಮಂಜುಳಾ ಹೆಗಡಾಳ್ ಹೇಳಿದರು.
ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಜಿಪಂ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗರ್ಭಾವಸ್ಥೆ ಅವಧಿಯಲ್ಲಿ ಆಹಾರ ಸೇವನೆ ಕುರಿತು ಹೆಚ್ಚು ಜಾಗೃತಿ ವಹಿಸಬೇಕು. ಸರ್ಕಾರ ಆದ್ಯತೆ ನೀಡಿ ಅಭಿಯಾನ ನಡೆಸುತ್ತಿದೆ ಎಂದು ತಿಳಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ. ವಿನಯ್ ಪಾಟೀಲ್ ಮಾತನಾಡಿ, 1ರಿಂದ 6 ವರ್ಷದ ಮಕ್ಕಳು ಪೌಷ್ಟಿಕತೆ ಕೊರತೆಯಿಂದ ಬಳಲುತ್ತಿದ್ದು, ಸೊಪ್ಪು, ತರಕಾರಿ ಹೆಚ್ಚು ಬಳಸಬೇಕು. ಇದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ನೂತನಾ ನಾಯ್ಕ ಮಾತನಾಡಿ, ಅಪೌಷ್ಟಿಕತೆ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಣ್ ಅಭಿಯಾನ ಜಾರಿಗೊಳಿಸಲಾಗಿದೆ. ಮಹಿಳೆಯರು ಹಾಗೂ ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೌಷ್ಟಿಕ ಆಹಾರ ಸೇವನೆ ಮುಖ್ಯ ಎಂದು ತಿಳಿಸಿದರು. ಇಒ ಪ್ರದೀಪಕುಮಾರ್, ನೇತ್ರಾವತಿ, ಶಾಂತಾ, ವೀಣಾ, ಶೈಲಾ, ರೇಣುಕಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.