

ಬೆಂಗಳೂರು: ಕರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ ಯಾರಾದರೂ ಮಹಾಮಾರಿ ಕರೊನಾಗೆ ಬಲಿಯಾದರೆ, ಅಂತಹವರ ಕುಟುಂಬಕ್ಕೆ ಸರ್ಕಾರ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಿದೆ. ಈ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಹೆಸರಿನಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕೋವಿಡ್ನಿಂದ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಪರಿಣಾಮ ಆ ಕುಟುಂಬಸಂಕಷ್ಟಕ್ಕೆ ಸಿಲುಕಿದ್ದು, ಅವರ ನೆರವಿಗಾಗಿ ಪರಿಹಾರ ನೀಡಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ 25-30 ಸಾವಿರ ಕುಟುಂಬಕ್ಕೆ ಅನುಕೂಲ ಆಗಲಿದೆ ಎಂದರು.
ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಹಣಕಾಸು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಇದಕ್ಕಾಗಿ ಸರ್ಕಾರಕ್ಕೆ 250-300 ಕೋಟಿ ರೂಪಾಯಿ ಬೇಕಾಗುತ್ತದೆ. ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮ ಆಗಿರುವುದರಿಂದಲೇ ಪರಿಹಾರ ನೀಡಲು ಸಾಧ್ಯವಾಗುತ್ತಿದೆ.ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡುತ್ತಿರುವ ರಾಜ್ಯ ನಮ್ಮದು ಎಂದರು.