ಮಾನವ ಸರಪಳಿ ನಿರ್ಮಿಸಲು ಯೋಜನೆ ಸಿದ್ಧ

dc
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬಿಡುಗಡೆ ಮಾಡಿದರು. ಎನ್.ಹೇಮಂತ್, ಸಿದ್ದಲಿಂಗ ರೆಡ್ಡಿ, ಮಲ್ಲೇಶಪ್ಪ, ಪ್ರದೀಪ್ ನಿಕ್ಕಂ ಇದ್ದರು.
Published on

ಶಿವಮೊಗ್ಗ: ಈ ಬಾರಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಿದ್ದು, ರಾಜ್ಯದ ವಿವಿಧೆಡೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಸೆ.15ರಂದು ಜಿಲ್ಲೆಯಲ್ಲೂ ಮಾನವ ಸರಪಳಿ ನಿರ್ಮಿಸಲು ಯೋಜನೆ ಸಿದ್ಧವಾಗಿದ್ದು, ಒಂದು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಡಿಸಿ ಗುರುದತ್ತ ಹೆಗಡೆ ಹೇಳಿದರು.

ಜಿಲ್ಲೆಯಲ್ಲಿ 60 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಶಾಲಾ ಕಾಲೇಜು, ಹಾಸ್ಟೆಲ್ ವಿದ್ಯಾರ್ಥಿಗಳು, ಗ್ರಾಪಂ ಹಾಗೂ ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು, ಸರ್ಕಾರಿ ನೌಕರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಭದ್ರಾವತಿ ತಾಲೂಕಿನ ಗಡಿಯಿಂದ ಶಿವಮೊಗ್ಗ ತಾಲೂಕಿನ ಗಡಿಯವರೆಗೆ ಮಾನವ ಸರಪಳಿ ರಚಿಸುವ ಜತೆಗೆ ಜಿಲ್ಲೆಯ ಆಯ್ದ 20 ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಮಾನವ ಹಕ್ಕುಗಳ ರಕ್ಷಣೆ, ಅಭಿವೃದ್ಧಿ, ಶಾಂತಿ ಮತ್ತು ಸ್ಥಿರತೆ ಮೂಲಕ ಪ್ರಜಾಪ್ರಭುತ್ವ ಬಲಪಡಿಸಲು ಹಾಗೂ ಮೌಲ್ಯಗಳನ್ನು ಎತ್ತಿ ಹಿಡಿಯುವ ಕುರಿತು ವಿಶೇಷ ಉಪನ್ಯಾಸ, ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಸಮಾಜ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ, ಡಿಸಿ ಕಚೇರಿ ಸಹಾಯಕ ಅಧಿಕಾರಿ ಪ್ರದೀಪ್ ನಿಕ್ಕಂ, ಸುರೇಶ್ ಉಪಸ್ಥಿತರಿದ್ದರು.
ಬಸ್ ಸೌಕರ್ಯ: ಮಾನವ ಸರಪಳಿ ರಚನೆಗೆ ಆಗಮಿಸುವ ವಿದ್ಯಾರ್ಥಿಗಳನ್ನು ಕರೆತರಲು ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದು 30 ನಿಮಿಷದ ಕಾರ್ಯಕ್ರಮ. ಸರ್ಕಾರಿ ಶಾಲೆಗಳಿಗೆ 65 ಕೆಎಸ್‌ಆರ್‌ಟಿಸಿ ಬಸ್ ಒದಗಿಸಲಾಗುತ್ತದೆ ಎಂದು ಜಿಪಂ ಸಿಇಒ ಎನ್.ಹೇಮಂತ್ ತಿಳಿಸಿದರು.
ಖಾಸಗಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳನ್ನು ಅವರದೇ ಸಂಸ್ಥೆಯ ಬಸ್‌ಗಳ ಮೂಲಕ ಕರೆತರಲು ಸೂಚಿಸಲಾಗಿದೆ. ಮಾನವ ಸರಪಳಿ ನಿರ್ಮಿಸುವ ಸ್ಥಳಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಅಗತ್ಯವಿರುವಲ್ಲಿ ಲಘು ಉಪಾಹಾರ ಮತ್ತು ಶುದ್ಧ ಕುಡಿಯುವ ನೀರು ಒದಗಿಸಲಾಗುವುದು ಅತ್ಯುತ್ತಮ ವೇಷಭೂಷಣದೊಂದಿಗೆ ಭಾಗವಹಿಸುವ ಶಾಲೆಗಳ ವಿದ್ಯಾರ್ಥಿಗಳು, ಸ್ವಸಹಾಯ ಸಂಘ, ಇತರ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಡಳಿತದಿಂದ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net