

ಶಿವಮೊಗ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ನ 44ನೇ ದಕ್ಷಿಣ ಪ್ರಾಂತ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಮೂರು ದಿನಗಳ ಸಮ್ಮೇಳನಕ್ಕೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಸೋಮವಾರ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ.
ಎಬಿವಿಪಿ ಸಂಘಟನೆ ಬಲವಾಗಿ ರೂಪುಗೊಂಡಿರುವ ಶಿವಮೊಗ್ಗದಲ್ಲಿ ನಡೆಯುತ್ತಿರುವ ಮೂರನೇ ಸಮ್ಮೇಳನವಿದು. ಹಿಂದೆ 1978 ಹಾಗೂ 1998ರಲ್ಲೂ ಪ್ರಾಂತ ಸಮ್ಮೇಳನ ಆಯೋಜಿಸಲಾಗಿತ್ತು. ಆಗ ನಡೆದ ಸಮ್ಮೇಳನಗಳಿಗಿಂತಲೂ ಈ ಬಾರಿ ಸಮ್ಮೇಳನವನ್ನು ದೊಡ್ಡ ಪ್ರಮಾಣದಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.
ದಕ್ಷಿಣ ಪ್ರಾಂತದ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸಮ್ಮೇಳನದಲ್ಲಿ ಭಾಗವಹಿಸುವರು.
ಭಾಗವಹಿಸುವ ಪ್ರತಿನಿಧಿಗಳಿಗೆ ಊಟ, ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿಧಿಗಳು ಸಮಾವೇಶ ಸ್ಥಳಕ್ಕೆ ಆಗಮಿಸಲು ಸ್ಥಳೀಯ ಶಿಕ್ಷಣ ಸಂಸ್ಥೆಗಳು ಸಾರಿಗೆ ವ್ಯವಸ್ಥೆ ಕಲ್ಪಿಸಿವೆ. ನಗರದ ಹಲವಾರು ಗಣ್ಯರು, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುತ್ತಿವೆ.