ಮಳೆ ಹಾನಿ ನಿಖರ ಮಾಹಿತಿ ಸಂಗ್ರಹ: ಮಧು

madu bangarappa
Published on

ಶಿವಮೊಗ್ಗ: ಈ ಬಾರಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗಿದೆ. ಅತಿವೃಷ್ಟಿ ಉಂಟಾಗದೇ ಇದ್ದರೂ ಹೆಚ್ಚು ದಿನ ನಿರಂತರ ಮಳೆಯಾಗಿರುವ ಕಾರಣ ಮೆಕ್ಕೆಜೋಳ ಹಾಗೂ ಅಡಕೆ ಬೆಳೆಗೆ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಸುಮಾರು 45 ಸಾವಿರ ಹೆಕ್ಟೇರ್ ಅಡಕೆ ತೋಟಕ್ಕೆ ಕೊಳೆರೋಗ ತಗುಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಳೆ ಮುಂದುವರಿದಿದ್ದು, ಕೊಳೆರೋಗ ಮತ್ತಷ್ಟು ಹೆಚ್ಚಾಗುವ ಅಪಾಯವಿದೆ. ಮಳೆಯಿಂದ ಉಂಟಾಗಿರುವ ಹಾನಿ ಬಗ್ಗೆ ಮೂರ‌್ನಾಲ್ಕು ದಿನಗಳಲ್ಲಿ ನಿಖರ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಅಡಕೆ ಬೆಳೆಗಾರರಿಗೆ ಎಲ್ಲ ರೀತಿಯ ನೆರವು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದರು.

ಕೊಳೆರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಜಿಲ್ಲೆಯಲ್ಲಿ ಸುಸಜ್ಜಿತ ಅಡಕೆ ಸಂಶೋಧನಾ ಕೇಂದ್ರ ಆರಂಭಿಸಬೇಕಿತ್ತು. ಆದರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ರಾಜ್ಯ ಸರ್ಕಾರ ಸಮಪರ್ಕವಾಗಿ ತನ್ನ ಜವಾಬ್ದಾರಿ ನಿರ್ವಹಿಸಲಿದೆ. ಬೋರ್ಡೋ ದ್ರಾವಣ ಖರೀದಿಗೆ ಸಹಾಯ ಧನ ಒದಗಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು. ಕೊಳೆರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ವಿಜ್ಞಾನಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ಮಳೆಗಾಲ ಮುಗಿದ ಬಳಿಕ ದುರಸ್ತಿ ಮಾಡಿಸಲಾಗುವುದು. ರಾಜ್ಯ ಸರ್ಕಾರದಿಂದ ಆಡಳಿತ ಪಕ್ಷದ ಶಾಸಕರ ಕ್ಷೇತ್ರಕ್ಕೆ ಸಿಎಂ ತಲಾ 50 ಕೋಟಿ ರೂ. ಅನುದಾನ ನೀಡಿದ್ದಾರೆ. ಪ್ರತಿಪಕ್ಷಗಳ ಶಾಸಕರು ಇರುವ ಕ್ಷೇತ್ರಕ್ಕೂ ಅನುದಾನ ನೀಡುವುದಾಗಿ ಹೇಳಿದ್ದಾರೆ. ಈ ಹಣದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚಿಸಲಾಗುವುದು. ಪ್ರತಿ ಕ್ಷೇತ್ರದಲ್ಲಿ 20-30 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ವಿಧಾನಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಹಾಪ್‌ಕಾಮ್ಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಪ್ರಮುಖರಾದ ಜಿ.ಡಿ.ಮಂಜುನಾಥ್, ರಮೇಶ್ ಶಂಕರಘಟ್ಟ, ಇಕ್ಕೇರಿ ರಮೇಶ್, ಡಾ. ಶ್ರೀನಿವಾಸ ಕರಿಯಣ್ಣ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net