ಡಿಸಿಎಂ, ಸಚಿವರ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿ ಸೆರೆ

Arrest Kaidhi
Published on

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಪ್ರಿಯಾಂಗ್ ಖರ್ಗೆ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಮೂಲದ ರಘುನಾಥ(೩೮) ಬಂಧಿತ. ಆರೋಪಿಯು ಶಿವಕುಮಾರ್ ಮತ್ತು ಪ್ರಿಯಾಂಕ್ ಖರ್ಗೆ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ, ವರ್ಗಾವಣೆ ಮಾಡಿಸಿಕೊಡುವುದಾಗಿ ಹಣ ಪಡೆದು ವಂಚಿಸುತ್ತಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯು ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಚಳ್ಳಕೆರೆ ಉಪ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎನ್.ಕಾವ್ಯ ಅವರಿಗೆ ಕರೆ ಮಾಡಿ ತಾನು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡಿದ್ದ. ಬೇರೆಡೆಗೆ ವರ್ಗಾವಣೆ ಮಾಡಿಸಿ ಕೊಡಲು ೨ ಲಕ್ಷ ರೂ. ಹಣಕ್ಕೆ ಬೇಡಿಕೆ ಇರಿಸಿದ್ದ. ಬಳಿಕ ಕಾವ್ಯ ಅವರಿಂದ ೮೦ ಸಾವಿರ ರೂ. ಪಡೆದು ವಂಚಿಸಿದ್ದ. ಈ ಸಂಬಂಧ ಸಚಿವ ಪ್ರಿಯಾಂಗ್ ಖರ್ಗೆ ಅವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗರಾಜ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net