

ಬೆಂಗಳೂರು: ವಾಟರ್ ಟ್ಯಾಂಕರ್‌ಗಳ ಚಾಲಕರು ಮದ್ಯ ಸೇವಿಸಿ ಚಾಲನೆ ಮಾಡುವುದು, ಅತಿ ವೇಗದ ಚಾಲನೆ, ನಿರ್ಲಕ್ಷ್ಯ ತನದ ಚಾಲನೆ ಮಾಡುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ವಿಶೇಷ ಕಾರ್ಯಾಚರಣೆ ನಡೆಸಿ, ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣದ ಮೂಲಕ ನಡೆದ ಸಾರ್ವಜನಿಕರ ಜತೆಗಿನ ಸಂವಾದದಲ್ಲಿ ಸಾರ್ವಜನಿಕರೊಬ್ಬರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬೇಸಿಗೆಯಲ್ಲಿ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ದೂರುಗಳು ಬರುತ್ತಲೇ ಇವೆ. ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ನಿಯಮ ಮೀರಿದರೆ ದಂಡ ವಿಧಿಸಲಾಗುತ್ತದೆ ಎಂದರು.
ಇನ್ನು ಹೆಬ್ಬಾಳ ಮೇಲು ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ದಟ್ಟಣೆ ಅವಧಿಯಲ್ಲಿ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದ ಸಂಸ್ಥೆಗಳ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗುವುದು. ಬಿಡಿಎ ಮತ್ತು ಇತರೆ ಸಂಸ್ಥೆಗಳು ಮೂಲಸೌಕರ್ಯ ಒದಗಿಸುವ ಕಾರ್ಯ ಕೈಗೊಂಡಿವೆ. ವಾಹನ ಸಂಚಾರ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಕಾಮಗಾರಿ ಪೂರ್ಣಗೊಂಡರೆ ಸಮಸ್ಯೆ ಬಗೆಹರಿಯಲಿದೆ. ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸಂಚಾರ ದಟ್ಟಣೆ ಅವಧಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದು, ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು.
ನಗರದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪ್ರಸ್ತಾಪಿಸಿ, ಮಹಿಳೆಯರ ಸುರಕ್ಷತೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಹಿಳೆಯೊಬ್ಬರು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಆಯುಕ್ತರು, ಮಹಿಳೆಯರು ಸೇರಿ ನಗರದ ಪ್ರತಿಯೊಬ್ಬರ ಸುರಕ್ಷತೆಗೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ೨೫೦ ಹೊಯ್ಸಳ ವಾಹನಗಳು ೨೪*೭ ಗಂಟೆ ಗಸ್ತು ತಿರುಗುತ್ತಿರುತ್ತವೆ. ಅಲ್ಲದೇ ಪೊಲೀಸ್ ಸಹಾಯವಾಣಿ ೧೧೨ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ ಯಾವುದೇ ಕೆಲಸ ಮಾಡಿಕೊಡಲು ಲಂಚ ಕೇಳಿದರೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಬಹುದು. ಸೂಕ್ತ ದಾಖಲೆಗಳನ್ನು ಹಾಜರುಪಡಿಸಿದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.