

ಆಲ್ದೂರು: ದೇಶದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣವಿದ್ದು, ದೇಶದ ಜನತೆ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಕಾತರರಾಗಿದ್ದಾರೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಹೇಳಿದರು.
ಬಿಜೆಪಿ ಆಲ್ದೂರು ಮಂಡಲದಿಂದ ಭಾನುವಾರ ಮೋದಿ ಮತೊಮ್ಮೆ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜ ಎಲ್ಲ ವರ್ಗದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿ ಅವರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.
ವಿಶ್ವವೇ ಭಾರತದ ಕಡೆ ಮುಖ ಮಾಡುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹತ್ತು ವರ್ಷದಲ್ಲಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯತ್ತಿದ್ದಾರೆ. ಸರ್ವ ಸಮುದಾಯಗಳ ಏಳಿಗೆಗೆ ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಈ ಬಾರಿಯೂ ಬೆಂಬಲಿಸಬೇಕು. ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಶಕ್ತಗೊಳಿಸಲು ಕೆಲಸಗಳು ಆರಂಭವಾಗಿವೆ. ಜನ ಸಂಚಾರ ಇರುವ ಕಡೆ ಗೋಡೆ ಬರಹಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಗೋಡೆ ಬರಹದ ಜಿಲ್ಲಾ ಸಂಚಾಲಕ ಮನುರಾಮೇಗೌಡ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಮಂಡಲದ ನಿಕಟಪೂರ್ವ ಅಧ್ಯಕ್ಷ ದಿನೇಶ್ ಮುಗಳವಳ್ಳಿ, ಮಂಡಲದ ನೂತನ ಅಧ್ಯಕ್ಷ ರವಿ ಬಸರವಳ್ಳಿ, ಜಿಲ್ಲಾ ಕಾರ್ಯದರ್ಶಿ ಸಂಪತ್, ಮಂಡಲದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಪ್ರಮುಖರಾದ ರಾಜು, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ್ ಆಚಾರ್ಯ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುದರ್ಶನ್, ಸಿಂಧುಕುಮಾರ್, ನಾಗೇಶ್ ಇತರರಿದ್ದರು.