

ಮೈಸೂರು: ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಕ್ರಮ ವಹಿಸಲಾಗುತ್ತದೆ… ಖಾತೆ-ಕಂದಾಯ ಮಾಡಿಕೊಡಲು ಸತಾಯಿಸುವ ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತದೆ… ಮೈಸೂರು ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುತ್ತದೆ…
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನೀಡಿದ ಭರವಸೆಗಳಿವು. ಸಂವಾದದಲ್ಲಿ ಜಿಲ್ಲಾಧಿಕಾರಿಗಳು ಮಾಧ್ಯಮದವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಎಲ್ಲರ ಪ್ರಶ್ನೆಗಳಿಗೂ ವಿವರವಾಗಿ ಉತ್ತರಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. ಈ ಸಂಬಂಧ ಜಿಲ್ಲೆಯ 400 ರೌಡಿಶೀಟರ್‌ಗಳ್ನು ಗುರುತಿಸಲಾಗಿದೆ. ಅವರ ಚಲನವಲನ ಗಮನಿಸಲಾಗುತ್ತಿದೆ. ಕೆಲವರಿಗೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಒಬ್ಬ ರೌಡಿಶೀಟರ್ ಅನ್ನು ಗಡಿಪಾರು ಮಾಡಲಾಗಿದೆ. ಇನ್ನೂ 3 ರೌಡಿಶೀಟರ್‌ಗಳನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತ ಯಾರೇ ಆದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.