

ಬೆಂಗಳೂರು: ತೆರಿಗೆ ವಸೂಲಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸದೇ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಪ್ರತಿ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ತೆರಿಗೆ ವಸೂಲು ಮಾಡಿರುವ ತಲಾ 10 ಪಿಡಿಒಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒಗೆ ಸೂಚಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ತೆರಿಗೆ ವಸೂಲಾತಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೇ ಇರುವ ಚರ್ಚೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಗತಿ ಕುಂಠಿತಗೊಂಡಿರುವ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ನೋಟಿಸ್ ನೀಡುವಂತೆ ಹಾಗೂ ಲಘು ದಂಡನೆ ವಿಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯ ಎಲ್ಲ ಜಿಲ್ಲೆಗಳ ಜಿ.ಪಂ. ಸಿಇಒಗಳಿಗೆ ಸೂಚಿಸಿದೆ.