

ಪಿರಿಯಾಪಟ್ಟಣ: ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಆರ್.ನಿರೂಪಾ ಅಭಿಪ್ರಾಯಪಟ್ಟರು.
ಪಟ್ಟಣದ ಎಸ್‌ಕೆಎಸ್‌ಟಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪಾಲಕರು ಮಕ್ಕಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ನೃತ್ಯ, ನಾಟಕ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳು ಮನಸ್ಸಿಗೆ ಉಲ್ಲಾಸ ನೀಡುವುದರ ಜತೆಗೆ ಪ್ರತಿಭೆಯನ್ನು ಹೊರಹಾಕಲು ಸಹಕಾರಿಯಾಗಿದೆ. ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಲ್ಲಿ ಸಾಮಾಜಿಕ ಸೇವೆ ಮತ್ತು ಶಿಸ್ತುಬದ್ಧ ಜೀವನ ನಮ್ಮದಾಗಲಿದೆ ಎಂದರು.
ಪ್ರಾಂಶುಪಾಲ ಮಹೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಓದು ಬರಹದ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮನೋಭಾವವನ್ನು ರೂಢಿಸಿಕೊಳ್ಳಬೇಕು ಎಂದರು.
ಬೆಟ್ಟದಪುರ ಅನಿಕೇತನ ಪದವಿಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಸೋಮಣ್ಣ, ಎಸ್‌ಕೆಎಸ್‌ಟಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ಥಾಮಸ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಶೋಕ್ ಕುಮಾರ್ ಗೌಡ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ನಾಗಣ್ಣ, ಶಿವಣ್ಣ, ರಘು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕೆ.ಸಿ.ಬೇಬಿ, ಉಪನ್ಯಾಸಕರಾದ ಕವಿತಾ, ರಮೇಶ್, ಲತಾ,ರೂಪಾ, ತನುಜಾ, ಯೋಗೇಶ್, ಮನು, ಅನಿತಾ ಹಾಗೂ ಸಿಬ್ಬಂದಿ ಇದ್ದರು.
.