

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಶೀಘ್ರವೇ ಸೂಕ್ತ ಕ್ರಮವಹಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶ್ವಾಸನೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ ರಾಜನಹಳ್ಳಿ ವಾಲ್ಮೀಕಿ ಗುರುಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಸಮುದಾಯದ ಶಾಸಕ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಇಲಾಖೆ ಅಧಿಕಾರಿಗಳ ಸಭೆ ಶೀಘ್ರವೇ ಕರೆದು ಚರ್ಚಿಸುವೆ. ನಿಗಮಕ್ಕೆ ಮಂಜೂರು ಮಾಡಿದ ಅನುದಾನದ ಜತೆಗೆ ಹೆಚ್ಚುವರಿ ಹಣ ನೀಡಿ ಸಮುದಾಯದ ಲಾನುಭವಿಗಳಿಗೆ ಅಗತ್ಯ ನೆರವಿಗೆ ಸರ್ಕಾರ ಬದ್ಧವಾಗಿದೆ.
ತಳವಾರ ಹೆಸರಿನಲ್ಲಿ ಬೇರೆ ಸಮುದಾಯಗಳು ನಕಲಿ ಜಾತಿ ಪ್ರಮಾಣಪತ್ರ ಪಡೆಯುವುದನ್ನು ತಡೆಯುವ ಇದೇ ಸಭೆಯಲ್ಲಿ ಚರ್ಚಿಸಿ, ಸೂಕ್ತ ನಿರ್ದೇಶನ ನೀಡುವುದಾಗಿ ಸಿಎಂ ತಿಳಿಸಿದರು. ಇದಕ್ಕೂ ಮುನ್ನ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಶಾಸಕರು ಮತ್ತು, ಮುಖಂಡರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದರು.
ಪರಿಶಿಷ್ಟ ವರ್ಗದವರ ಅಭಿವೃದ್ಧಿ, ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ನಿಗಮಕ್ಕೆ ಸರ್ಕಾರ 187.33 ಕೋಟಿ ರೂ. ಬಿಡುಗಡೆ ಮಾಡಿತ್ತು. ಈ ಪೈಕಿ 88.63 ಕೋಟಿ ರೂ. ದುರ್ಬಳಕೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ದುರುಪಯೋಗಕ್ಕೆ ಕಾರಣರರ್ತರಾದವರ ಮೇಲೆ ಸರ್ಕಾರ ಕ್ರಮವಹಿಸಿರುವುದು ಸ್ವಾಗತಾರ್ಹ. ದುರ್ಬಳಕೆಗೆ ಕಾರಣರಾದವರ ಮೇಲೆ ಕಠಿಣ ಕ್ರಮವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ದುರ್ಬಳಕೆಯಾದ ಮೊತ್ತ ನಿಗಮದ ಖಾತೆಗೆ ಮರಳುವ ತನಕ ಸರ್ಕಾರದ ಬೊಕ್ಕಸದಿಂದ ಹೆಚ್ಚುವರಿ ಅನುದಾನ ನೀಡಿ ಕಾರ್ಯಕ್ರಮಗಳಿಗೆ ಅಡೆತಡೆ ಉಂಟಾಗದಂತೆ ನೋಡಿಕೊಳ್ಳಬೇಕು. ಕಾಲಮಿತಿ ಪ್ರಕಾರ ಅನುದಾನ ನೀಡಿದರೆ ಲಾನುಭವಿಗಳಿಗೆ ಅನುಕೂಲವಾಗುತ್ತದೆ ಎಂದೂ ತಿಳಿಸಿದೆ.
ಅಲ್ಲದೆ, ‘ತಳವಾರ’ ಹಿಂದುಳಿದ ವರ್ಗಗಳ ಸಮುದಾಯಗಳು ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿದ್ದು, ಸಮುದಾಯದ ಜನರಿಗೆ ಅನ್ಯಾಯವಾಗುತ್ತಿದೆ. ಅಧಿಕಾರಿಗಳು ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ, ಸ್ಥಳ ಮಹಜರು ಮಾಡದೆ ಎಸ್‌ಟಿ ಪ್ರಮಾಣಪತ್ರ ನೀಡುತ್ತಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.
ನಾಯಕ ಸಮುದಾಯದ ತಳವಾರರಿಗೆ ಮಾತ್ರ ಎಸ್‌ಟಿ ಪ್ರಮಾಣಪತ್ರ ನೀಡಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಕೋರಿದರು. ಸಭೆಯಲ್ಲಿ ಶಾಸಕರಾದ ಬಿ.ಎಂ.ನಾಗರಾಜ, ಟಿ.ಗುರುಮೂರ್ತಿ, ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಡಾ.ಶ್ರೀನಿವಾಸ, ಕೆಪಿಎಸ್‌ಸಿ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಇನ್ನಿತರರು ಇದ್ದರು.