ಚಳಿಗಾಲ ಅಧಿವೇಶನಕ್ಕೆ ಸೂಕ್ತ ಭದ್ರತೆ

IMG20241129195011.jpg
Published on

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.9ರಿಂದ 19ರವರೆಗೆ ಹತ್ತು ದಿನಗಳ ಕಾಲ ನಡೆಯುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಆರ್.ಹೇಳಿದರು.

ನಗರದ ಪೊಲೀಸ್ ಆಯುಕ್ತ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲದೆ, ಮುಖ್ಯಮಂತ್ರಿ, ಸಚಿವರು, ಶಾಸಕರು, ಎಂಎಲ್‌ಸಿ ಹಾಗೂ ಹಿರಿಯ ಅಧಿಕಾರಿಗಳು ಸೂಕ್ತ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ವಾಹನ ಸಂಚಾರ ದಟ್ಟಣೆ ಉಂಟಾಗದಂತೆ ಸಾರ್ವಜನಿಕರಿಗೆ ಪರ್ಯಾಯ ಮಾರ್ಗಗಳನ್ನು ರೂಪಿಸಲಾಗುತ್ತಿದೆ. ಎಲ್ಲ ಭದ್ರತೆಯ ಸಿದ್ದತೆ ಕುರಿತು ಖುದ್ದಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

6 ಸಾವಿರ ಪೊಲೀಸರ ನಿಯೋಜನೆ:

ಈ ಬಾರಿ ಚಳಿಗಾಲ ಅಧಿವೇಶನಕ್ಕೆ ಅಂದಾಜು 6 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಎಂಟು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಹಿರಿಯ ಅಧಿಕಾರಿಗಳಿಗೆ ಪ್ರತ್ಯೇಕ ಜವಾಬ್ದಾರಿಗಳನ್ನು ವಹಿಸಲಾಗುತ್ತಿದೆ. ಭದ್ರತೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಊಟ, ವಸತಿಗಾಗಿ ಟೆಂಟ್ ನಿರ್ಮಿಸಲಾಗುತ್ತಿದೆ. ಅಲ್ಲಿಯೇ ಬೆಳಗಿನ ಉಪಹಾರ, ಮಧ್ಯಾಹ್ನ, ರಾತ್ರಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಚಳಿ ಹೆಚ್ಚಿರುವ ಹಿನ್ನೆಲೆ ಅಧಿವೇಶನ ಕರ್ತವ್ಯಕ್ಕೆ ಬರುವ ಸಿಬ್ಬಂದಿಗೆ ಸ್ವೇಟರ್, ಹೊದಿಕೆಗಳನ್ನು ತೆಗೆದುಕೊಂಡು ಬರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಉತ್ತರ ವಲಯ ಐಜಿಪಿ ವಿಕಾಶಕುಮಾರ ವಿಕಾಸ್, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net