ಉದ್ಯೋಗ ಮೇಳ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಿ

DC Meeting
ಕೋಲಾರ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಕೌಶಲ ಮಿಷನ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷಾ ಮಾತನಾಡಿದರು. ಬಿ.ನಿಖಿಲ್ ಇದ್ದರು.
Published on

ಕೋಲಾರ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲು ಯೋಜನೆ ರೂಪಿಸಿದ್ದು, ವಿವಿಧ ಇಲಾಖೆ ಅಧಿಕಾರಿಗಳಿಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಕೌಶಲ ಮಿಷನ್ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲು ಅಗತ್ಯ ಪೂರ್ವಭಾವಿ ತಯಾರಿ ಕಾರ್ಯಕ್ರಮ ಕೈಗೊಳ್ಳಬೇಕು. ಕೌಶಲ್ಯಾಭಿವೃದ್ಧಿ ಯೋಜನೆ ಜಾರಿ ಸಂಬಂಧ ಜಾರಿಗೊಳಿಸಲಾದ ಎಲ್ಲ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಪ್ರಗತಿಯನ್ನು ರಾಜ್ಯದ ಪ್ರಗತಿಯೊಂದಿಗೆ ಹೋಲಿಸಿ ತುಲಾನಾತ್ಮಕ ವರದಿ ಮಂಡಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅನೇಕ ಕೈಗಾರಿಕೆಗಳು ಸ್ಥಾಪನೆಯಾಗಿವೆ, ಉತ್ಪಾದನೆಗೆ ತಕ್ಕಂತೆ ಕೌಶಲವಿರುವ ಉದ್ಯೋಗಸ್ಥರ ಅಗತ್ಯವಿದೆ. ಇದರಿಂದಾಗಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಕೌಶಲ ಅಭಿವೃದ್ಧಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಅಂತರ್ ಇಲಾಖೆ ಸಮನ್ವಯ ಅಗತ್ಯ ಎಂದರು.
ಕೆನರಾ ಬ್ಯಾಂಕ್ ಸ್ವಯಂ ಉದ್ಯೋಗ ತರಬೇತಿ ಕೇಂದ್ರ ಹಾಗೂ ಸಿಡಾಕ್ ಸಂಸ್ಧೆಗಳ ವತಿಯಿಂದ ಆಯೋಜಿಸಲಾಗುವ ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಫಲಶ್ರುತಿ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಕೃಷಿ ಸಂಬಂಧಿತ ವಿವಿಧ ಕೌಶಲ್ಯ ತರಬೇತಿಗಳನ್ನು ಪಟ್ಟಿ ಮಾಡಿ ಅನುಷ್ಠಾನಗೊಳಿಸಬೇಕು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯತರ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೃದು ಕೌಶಲ ಹಾಗೂ ಸ್ಪೋಕನ್ ಇಂಗ್ಲೀಷ್ ತರಬೇತಿ ಆಯೋಜಿಸುವ ಮೂಲಕ ಅವರ ಕೌಶಲ್ಯಾಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಸೂಚಿಸಿದರು.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ತರಬೇತಿ, ಯುವನಿಽ ಯೋಜನೆಯಲ್ಲಿ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಫಲಾನುಭವಿಗಳು ಸೌಲಭ್ಯಗಳಿಂದ ವಂಚನೆಗೆ ಒಳಗಾಗಿದ್ದು ಕಂಡು ಬಂದರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ನಿಖಿಲ್ ಮಾತನಾಡಿ, ಜಿಲ್ಲೆಯಲ್ಲಿ ಕೌಶಲಯುಕ್ತ ಪರಿಸರ ನಿರ್ಮಿಸಲು ಎಲ್ಲ ಸಂಬಂಧಿಸಿದ ಭಾಗಿದಾರರು ಸಮನ್ವಯ ಸಾಽಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕುಮಾರಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಲತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾರಾಯಣಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net