

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ನಡುವಿನ ಜಟಾಪಟಿ ತಾರಕಕ್ಕೇರಿದ್ದು, ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚಂದ್ರಶೇಖರ್ ಅವರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕುಮಾರಸ್ವಾಮಿ ಅವರು ಸೆ.೨೮ ಮತ್ತು ಸೆ.೨೯ರಂದು ಸುದ್ದಿಗೋಷ್ಠಿ ನಡೆಸಿ ತಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಮೌಖಿಕವಾಗಿ ಬೆದರಿಸಿದ್ದಾರೆ. ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ದುರುದ್ದೇಶಪೂರಿತ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಅವರ ಆಪ್ತರಾದ ಸುರೇಶ್ ಬಾಬು ಅವರು ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಂದ್ರಶೇಖರ್ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಸುಳ್ಳು ಆರೋಪ, ಬೆದರಿಕೆ:
ಕ್ರಿಮಿನಲ್ ಮೊಕದ್ದಮೆಯ ಆರೋಪಿಯಾಗಿರುವ ಕುಮಾರಸ್ವಾಮಿ ಅವರು ಆ ಪ್ರಕರಣದ ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಎಸ್‌ಐಟಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನಾನು ಬೌರಿಂಗ್ ಆಸ್ಪತ್ರೆಯಿಂದ ಖೊಟ್ಟಿ ವೈದ್ಯಕೀಯ ಪ್ರಮಾಣ ಪಡೆದು ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿ ಮುಂದುವರಿದಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಲಂಚ ತೆಗೆದುಕೊಂಡಿದ್ದೇನೆ ಎಂದು ಆಪಾದಿಸಿದ್ದಾರೆ. ಅಲ್ಲದೆ, ನನ್ನನ್ನು ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಸಿದ್ದಾರೆ. ನಮ್ಮ ಕುಟುಂಬ ಸದಸ್ಯರ ವಿರುದ್ಧವೂ ಸುಳ್ಳು ಆರೋಪ ಹೊರಿಸಿ ತೊಂದರೆ ಕೊಡುತ್ತಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ವಿವರಿಸಿದ್ದಾರೆ.