ಎಡಿಜಿಪಿ ಸೀಮಂತ್‌ಕುಮಾರ್ ಸಿಂಗ್ ಸೇರಿ 9 ಮಂದಿ ವಿರುದ್ಧ : ಲೋಕಾಯುಕ್ತ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಿದ ಹೈಕೋರ್ಟ್

highcourt
Published on

ಬೆಂಗಳೂರು: ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಿದ ಆರೋಪದಲ್ಲಿ ಎಡಿಜಿಪಿ ಸೀಮಂತ್‌ಕುಮಾರ್ ಸಿಂಗ್ ಸೇರಿ ಇತರ 9 ಅಧಿಕಾರಿಗಳ ವಿರುದ್ಧ ಲೊಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆರೋಪಿತ ಅರ್ಜಿದಾರ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದಲ್ಲಿ ವಿಚಾರಣಾ ಪ್ರಕ್ರಿಯೆ ಮುಂದುವರಿಸಬಹುದು ಎಂದು ಹೇಳಿದೆ.

ಪ್ರಕರಣ ಸಂಬಂಧ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಲೋಕಾಯುಕ್ತ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಎಂ.ಕೆ.ತಿಮ್ಮಯ್ಯ, ಸೀಮಂತ್‌ಕುಮಾರ್ ಸಿಂಗ್ ಸೇರಿ ಏಳು ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ವಿಶೇಷ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿರುವ ಕ್ರಮವನ್ನು ಮಾತ್ರ ರದ್ದುಪಡಿಸಿದೆ. ಆದರೆ, ದೂರನ್ನು ರದ್ದುಪಡಿಸಲು ನಿರಾಕರಿಸಿದೆ.

ಜತೆಗೆ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ಆರೋಪಗಳು ನೇರವಾಗಿ ಕರ್ತವ್ಯ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆಯಬೇಕಾದ ಅಗತ್ಯವಿಲ್ಲ ಎಂದು ಪೀಠ ಹೇಳಿದೆ. ತಪ್ಪಿತಸ್ಥ ಅಧಿಕಾರಿಗಳು ಅಧಿಕೃತವಾಗಿ ಸರ್ಚ್ ವಾರೆಂಟ್ ಪಡೆದು ದೂರುದಾರರ ಮನೆ ಪರಿಶೀಲನೆ ನಡೆಸಿದ್ದಾರೆ. ಇದು ಅಧಿಕೃತ ಕರ್ತವ್ಯದ ಭಾಗವಾಗಿದೆ. ಆದ್ದರಿಂದ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?

ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಸಂಬಂಧ ಅಪರಿಚಿತ ಅಧಿಕಾರಿಗಳು, ದೂರುದಾರ ಆರ್‌ಟಿ ನಗರದ ಮೋಹನ್‌ಕುಮಾರ್ ಸೇರಿ ವಿವಿಧ ಖಾಸಗಿ ವ್ಯಕ್ತಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ 2021ರ ನವೆಂಬರ್‌ನಲ್ಲಿ ಬಿಡಿಎ ದೂರು ನೀಡಿತ್ತು. ಈ ಸಂಬಂಧ ಬಿಡಿಎ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು (ಸೀಮಂತ್‌ಕುಮಾರ್ ತಂಡ) ಪರಿಶೀಲನೆ ನಡೆಸಿ ದೂರುದಾರರ ಹೆಸರು ಸೇರಿ ಇತರರ ಹೆಸರಿದ್ದ ದಿನಚರಿ ಪುಸ್ತಕವನ್ನು ವಶಪಡಿಸಿಕೊಂಡಿದ್ದರು.

ಅರ್ಜಿದಾರ ಅಧಿಕಾರಿಗಳು ಎಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿತ್ತು. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಲಭ್ಯವಾಗದಿದ್ದರೂ ಅರ್ಜಿದಾರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net