

ಬೆಂಗಳೂರು: ಮಂಡ್ಯದಲ್ಲಿ ಜೂನ್ 7, 8 ಮತ್ತು 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದ್ದು, ಸಮ್ಮೇಳನಕ್ಕೆ 30 ಕೋಟಿ ರೂ. ಅನುದಾನ ನೀಡುವುದಾಗಿ ಸರಕಾರ ಭರವಸೆ ನೀಡಿರುವುದಾಗಿ ಕನ್ನಡ ಸಾಹಿತ್ಯ ಪರಿಷತ್ತು ಹೇಳಿದೆ.
ಈ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಜೂನ್ 7, 8 ಮತ್ತು 9ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.
ಜೂನ್ ವೇಳೆ ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿತು ನೀತಿ ಸಂಹಿತೆ ಕೂಡ ರದ್ದಾಗಿರುತ್ತದೆ. ಶಾಲೆಗಳೂ ಆರಂಭವಾಗಿರುತ್ತವೆ. ಆ ವೇಳಗೆ ಮಳೆಗಾಲ ಇನ್ನೂ ಆರಂಭವಾಗಿರುವುದಿಲ್ಲ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಜೂನ್‌ನಲ್ಲಿಯೇ ಸಾಹಿತ್ಯ ಸಮ್ಮೇಳನ ನಡೆಯುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯಕ್ಕೆ ಬರಲಾಯಿತು. ಅದಕ್ಕೆ ಸಿಎಂ ಕೂಡ ಸಮ್ಮತಿಸಿದರು.
ಅರ್ಥಪೂರ್ಣ ಆಚರಣೆಗೆ ಸೂಚನೆ: ಈ ಬಾರಿಯ ಸಮ್ಮೇಳನವನ್ನು ಅದ್ಧೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು, ಕನ್ನಡಪರ ಸಂಘಟನೆಗಳನ್ನೂ ವಿಶ್ವಾಸಕ್ಕೆ ಪಡೆಯಲು ಸೂಚಿಸಿದರು. ಸಮ್ಮೇಳನಾಧ್ಯಕ್ಷರ ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷರಿಗೆ ಸಿಎಂ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಮಾತನಾಡಿ, ಈ ಬಾರಿ 87ನೇ ವರ್ಷದ ಸಾಹಿತ್ಯ ಹಬ್ಬ ನಡೆಯುತ್ತಿರುವುದರಿಂದ 87 ಮಂದಿ ಸಾಧಕರಿಗೆ ಸನ್ಮಾನ ಮಾಡಲಾಗುವುದು. ಜತೆಗೆ, ಮೂರು ದಿನಗಳ ಕಾಲ ಕನ್ನಡ ವಿಚಾರ ಗೋಷ್ಠಿ ಮುಂತಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸಮ್ಮೇಳನಕ್ಕಾಗಿ 30 ಕೋಟಿ ರೂ.ಗಳ ಅನುದಾನ ಒದಗಿಸುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಮತ್ತಿತರರು ಉಪಸ್ಥಿತರಿದ್ದರು.