

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿ ದಿನ ಒಂದು ಟಿಎಂಸಿ ನೀರು ಹರಿಸಬೇಕೆಂದು ನೀಡಿರುವ ಸೂಚನೆಗೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಗುರುವಾರ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯದಲ್ಲಿ ಎರಡು ಮುಖ್ಯ ತೀರ್ಮಾನ ಕೈಗೊಂಡರು. ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವುದು ಹಾಗೂ ಮುಂದಿನ ಹೆಜ್ಜೆ ಬಗ್ಗೆ ತೀರ್ಮಾನ ಮಾಡಲು ತಕ್ಷಣವೇ ಸರ್ವಪಕ್ಷ ಸಭೆ ನಡೆಸಲು ನಿರ್ಧರಿಸಿದರು.
ಸಭೆಯಲ್ಲಿ ಅಧಿಕಾರಿಗಳು ಕಾವೇರಿ ನದಿ ನೀರಿನ ಸಂಗ್ರಹಣೆ, ತಮಿಳುನಾಡಿಗೆ ಹರಿಯುತ್ತಿರುವ ನೀರಿನ ಪ್ರಮಾಣ, ಒಳ ಹರಿವಿನ ಲೆಕ್ಕಾಚಾರವನ್ನು ಸಿಎಂ ಹಾಗೂ ಡಿಸಿಎಂ ಗಮನಕ್ಕೆ ತಂದರು.
ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದರು.
ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು ಸಮಿತಿಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಜುಲೈ 12ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.
ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದರು.ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.
ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.
ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅಂತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಸಿಎಂ ತಿಳಿಸಿದರು.
ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.