ಅಂಬೇಡ್ಕರ್ ಜಯಂತಿ ಆಚರಣೆಗೆ ಸಕಲ ಸಿದ್ಧತೆ

22blrp3-c.n.dani
ಸಿ.ಎನ್.ದಾನಿ
Published on

ಬೇಲೂರು: ಬೇಲೂರು ಪಟ್ಟಣದಲ್ಲಿ ಮೇ 5 ರಂದು ನಡೆಯಲಿರುವ ಡಾ.ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಛಲವಾದಿ ಮುಖಂಡ ಸಿ.ಎನ್.ದಾನಿ ಹೇಳಿದರು.

ಈ ಬಾರಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಷ್ಟೇ ಅಲ್ಲದೆ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕಾಗಿ ಈಗಾಗಲೇ ಸಮಾಜದ ಮುಖಂಡರ ಸಮ್ಮುಖದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಛಲವಾದಿ ಸಮುದಾಯದ ಗುರುಗಳಾದ ಶ್ರೀ ವಸವನಾಗಿದೇವ ಗುರುಗಳು ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ತಾಲೂಕಿನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಅಭಿಮಾನಿಗಳು, ಅನುಯಾಯಿಗಳು, ಚಿಂತಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತರಬೇಕೆಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರಸಭೆ ಮಾಜಿ ಸದಸ್ಯ ಮಂಜುನಾಥ್ ಮಾತನಾಡಿ, ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದು, ಪಟ್ಟಣದಲ್ಲಿ ಈಗಾಗಲೇ ಅನೇಕ ಕಾರ್ಯಕ್ರಮಗಳು ನಡೆದಿರುವುದರಿಂದ ಟ್ರಾಫಿಕ್ ಸಮಸ್ಯೆಯಿಂದ ಜನರಿಗೆ ಕಿರಿಕಿರಿ ಆಗಬಾರದೆಂದು ಮೆರವಣಿಗೆ ನಡೆಸದೆ ಡಾ.ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ತಿಳಿಸುವ ಗುರಿ ಹೊಂದಿದ್ದು ಉತ್ತಮ ವೇದಿಕೆ ಮೂಲಕ ಉಪನ್ಯಾಸ ಕೊಡಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾದಿಹಳ್ಳಿ ಹೋಬಳಿ ಘಟಕದ ಛಲವಾದಿ ಮಹಾಸಭಾದ ಅಧ್ಯಕ್ಷ ಈಶ್ವರ್ ಪ್ರಸಾದ್, ಬಿಜೆಪಿ ಮುಖಂಡ ದೇವಿಹಳ್ಳಿ ಮಲ್ಲಿಕಾರ್ಜುನ್, ಡಿಎಸ್‌ಎಸ್ ಸಂಚಾಲಕ ದೇವರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net