

ಚನ್ನರಾಯಪಟ್ಟಣ: ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯ ಅಡಿಪಾಯ ಕಾಮಗಾರಿಯನ್ನು ಶಾಸಕ ಸಿ.ಎನ್.ಬಾಲಕೃಷ್ಣ ವೀಕ್ಷಿಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ತಳಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಪುರಸಭೆಯ ಪ್ರಾಯೋಜಕತ್ವದಲ್ಲಿ ಪ್ರತಿಮೆ ಸ್ಥಾಪನೆಗೆ ಅಡಿಪಾಯ ಕಾಮಗಾರಿ ನಿರ್ವಹಣೆ ಮಾಡುತ್ತಿದ್ದು, ಎರಡು ತಿಂಗಳಲ್ಲಿ ಎಲ್ಲ ಕೆಲಸ ಪೂರ್ಣಗೊಳಿಸಿ ಬೃಹತ್ ಕಾರ್ಯಕ್ರಮ ಆಯೋಜಿಸಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ.ಮಹದೇವಪ್ಪ, ಉನ್ನತಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಪ್ರತಿಮೆ ಅನಾವರಣ ಮಾಡಲಾಗುವುದು ಎಂದರು.
9 ಅಡಿ ಎತ್ತರದ ಕಟ್ಟಡದ ಮೇಲೆ 12 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು. ಇದರೊಂದಿಗೆ ಪಕ್ಕದಲ್ಲಿಯೇ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನೂ ಸ್ಥಾಪನೆ ಮಾಡುವ ಸಂಕಲ್ಪ ಮಾಡಿದ್ದು, ಮುಂಬರುವ ಗಾಂಧಿ ಜಯಂತಿ ದಿನದಂದು ಈ ಕಾರ್ಯ ಬಹುತೇಕ ನೆರವೇರಲಿದೆ ಎಂದು ಮಾಹಿತಿ ನೀಡಿದರು.
ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ಟಿಎಪಿಸಿಎಂಎಸ್‌ನ ಅಧ್ಯಕ್ಷ ಮರಗೂರು ಅನಿಲ್, ಮುಖ್ಯಾಧಿಕಾರಿ ಆರ್.ಯತೀಶ್ ಕುಮಾರ್, ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಎಂ.ಆರ್.ಮಂಜುನಾಥ್ ಗ್ರಾಮ ಲೆಕ್ಕಾಧಿಕಾರಿ ಶ್ರೀಧರ್, ದಲಿತಪರ ಸಂಘಟನೆಗಳ ಮುಖಂಡರು ಇದ್ದರು.