ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

vidanasouda
Published on

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (ಆ.15) ಮತ್ತು ಸಂವಿಧಾನ ದಿನಾಚರಣೆ (ನ.6) ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್‌ ಎಚ್‌.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು.

ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net