ಕರೊನಾ ಮಹಾಮಾರಿಗೆ ಕಲಬುರಗಿಯಲ್ಲಿ 5ನೇ ಬಲಿ: ರಾಜ್ಯದಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆ

08ff54a7-a137-4de8-b99c-be065fcd9ae4
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿಗೆ ಕಲಬುರಗಿಯ ಇನ್ನೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿದ್ದರೆ, ಕಲಬುರಗಿಯಲ್ಲಿ ಇದು ಐದನೇ ಸಾವಿನ ಪ್ರಕರಣವಾಗಿದೆ.

57 ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಏಪ್ರಿಲ್ 21ರಂದು ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಉಸಿರಾಟದ ತೊಂದರೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಇವರು ಬಳಲುತ್ತಿದ್ದರು ಎನ್ನಲಾಗಿದೆ.

ಕಾಮಾಲೆ ರೋಗದಿಂದ ಬಳಲುತ್ತಿದ್ದ ಇವರನ್ನು ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯದಲ್ಲಿ ಬದಲಾವಣೆ ಕಾಣದಿದ್ದಾಗ ಕಲಬುರಗಿ ಖಾಸಗಿ ಆಸ್ಪತ್ರೆಗೆ ಮಾ.29ರಂದು ದಾಖಲಿಸಲಾಗಿತ್ತು. ಅಲ್ಲಿ ಮೂರು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಅವರನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ಅಡ್ಮಿಟ್​ ಮಾಡಲಾಗಿತ್ತು. ಆದರೆ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದ್ದರು.

ಆದರೆ ಇವರು ಆಳಂದದಲ್ಲಿ ಖಾಸಗಿ ವೈದ್ಯರ ಹತ್ತಿರ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅಲ್ಲಿಯೂ ಆರೋಗ್ಯದಲ್ಲಿ ಬದಲಾವಣೆ ಕಾಣದಾಗ ವೈದ್ಯರ ಸಲಹೆಯ ಮೇರೆಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕರೊನಾ ಸೋಂಕು ಪತ್ತೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತರಿಗೆ ತಂದೆ, ತಾಯಿ, ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಕುಟುಂಬ ವರ್ಗದವರು ಹಾಗೂ ಇವರ ಜತೆ ನೇರ ಸಂಪರ್ಕಕ್ಕೆ ಬಂದ ಒಟ್ಟೂ 43 ಜನರನ್ನು ಮುಂಜಾಗ್ರತಾ ಕ್ರಮವಾಗಿ ಐಸೋಲೇಷನ್ ವಾರ್ಡ್​ನಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಇವರಲ್ಲಿ ಮೃತರ ತಾಯಿಗೂ ಕರೊನಾ ಸೋಂಕು ದೃಢಪಟ್ಟಿದೆ. ಮೃತರು ವಾಸಿಸುತ್ತಿರುವ ಪ್ರದೇಶವನ್ನು ಸೀಲ್​ಡೌನ್​ ಮಾಡಲಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಕರೊನಾ ಒಂಬತ್ತು ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನ 13 ವರ್ಷದ ಬಾಲಕನಿಗೂ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿದೆ.

ಇಲ್ಲಿಯವರೆಗೆ 193 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಗರ್ಭಿಣಿ ಸೇರಿದಂತೆ 299 ಮಂದಿ ಸಾಮಾನ್ಯ ವಾರ್ಡ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಐವರನ್ನು ಐಸಿಯುನಲ್ಲಿ ಇಡಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net