ಶಾಸಕ ಮುನಿರತ್ನಗೆ ಮತ್ತೊಂದು ಶಾಕ್: ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್​​!

mla
Published on

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕೊಲೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಬೆನ್ನೆಲ್ಲೇ ಬಿಜೆಪಿಯಿಂದ ಅವರಿಗೆ ನೋಟಿಸ್ ಜಾರಿಯಾಗಿದೆ.

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್​ ಅವರು ಶಾಸಕ ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋಪದ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

ಮುನಿರತ್ನ ಅವರದ್ದು ಎನ್ನಲಾದ ಆಡಿಯೋದಲ್ಲಿ ಅವಹೇಳನಕಾರಿಯಾಗಿ ಮಾತನಾಡಲಾಗಿದೆ ಎಂಬುದು ಹಲವೆಡೆ ಪ್ರಸಾರಗೊಳ್ಳುತ್ತಿದೆ. ಇದಕ್ಕೆ ಕುರಿತಂತೆ ತಮ್ಮ ಮೇಲೆ ಎಫ್​ಐಆರ್​ ಕೂಡ ದಾಖಲಾಗಿದೆ. ಈ ತರಹದ ಘಟನೆ ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ. ಆದುದರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ 5 ದಿನಗಳ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಹಾಜರಾಗಿ ಸ್ಪಷ್ಟಿಕರಣ ನೀಡಬೇಕೆಂದು ತಿಳಿಸಲಾಗಿದೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕೊಲೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರದಿಂದ ಆಂಧ್ರಪ್ರದೇಶದ ಚಿತ್ತೂರು ಕಡೆಗೆ ತೆರಳುತ್ತಿದ್ದ ಅವರನ್ನು ಮೊಬೈಲ್ ಲೊಕೇಷನ್ ಆಧರಿಸಿ ಪತ್ತೆ ಮಾಡಿ ಕೋಲಾರ ಜಿಲ್ಲೆಯ ಮುಳಬಾಗಿಲಿನ ನಂಗಲಿ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜರಾಜೇಶ್ವರಿನಗರ ಶಾಸಕರ ವಿರುದ್ಧ ಶುಕ್ರವಾರ ಇಲ್ಲಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಸದ್ಯ ಮುನಿರತ್ನರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net