

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ, ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಮುಂಬರುವ ಅಧಿವೇಶನದಲ್ಲಿ ಕಾಯ್ದೆಯಲ್ಲಿ ಬದಲಾವಣೆ ಮಾಡಲಾಗುವುದು. ಈ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ಧಾರೆ.
ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯ ಪ್ರಕಾರ ಬಲವಂತವಾಗಿ ಯಾರನ್ನಾದರೂ ಮತಂತಾರ ಮಾಡಿದರೆ ಅಂತಹವರಿಗೆ 3-5 ವರ್ಷ ಜೈಲು ಶಿಕ್ಷೆ 25 ಸಾವಿರ ರೂ. ದಂಡ ಹಾಕಲಾಗುತ್ತಿತ್ತು. ಅಪ್ರಾಪ್ತ, ಬುದ್ದಿಮಾಂದ್ಯರನ್ನು ಮತಾಂತರ ಮಾಡಿದರೆ 3-10 ವರ್ಷ ಜೈಲು ಶಿಕ್ಷೆ 50 ಸಾವಿರ ರೂ. ದಂಡ ಎಂದು ಹೇಳಲಾಗಿತ್ತು.
ಮತಾಂತರಕ್ಕೆ ಬಲಿಯಾದವರಿಗೆ 5 ಲಕ್ಷ ರೂ. ವರೆಗೂ ಪರಿಹಾರ ಮತ್ತು ಇದನ್ನು ಪುನರಾವರ್ತಿಸಿದವರಿಗೆ 5 ವರ್ಷ ಜೈಲು 2 ಲಕ್ಷ ರೂ. ದಂಡ ಹಾಕಲಾಗುತ್ತಿತ್ತು. ಆದರೆ, ಇವುಗಳಲ್ಲಿ ಬದಲಾವಣೆ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು ಮುಂಬರುವ ಅಧಿವೇಶನದಲ್ಲಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡಬೇಕು. ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡಬೇಕು.
ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡಬೇಕು. ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡಬೇಕಿದೆ. ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೋತ್ತರ ಘಟನೆಯನ್ನು ಸಂಪೂರ್ಣವಾಗಿ ದಾಖಲಿಸಿಕೊಳ್ಳಬೇಕು.
ತಕರಾರುಗಳಿದ್ದಲ್ಲಿ ದೂರನ್ನು ದಾಖಲಿಸಬಹುದು. ಮತಾಂತರ ಆದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡುತ್ತಾರೆ. ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ, ಸೇರಿದಂತೆ ಇತರ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.