

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಾಲ್ವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲೇ ಸರ್ಕಾರದ ವಿರುದ್ಧ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಲಿದೆ. ಕೆಲವು ಜಾತಿಗಳಿಗೆ ಸಂಬಂಧಿತ ವಿಚಾರವಾಗಿ ಇಂಥದ್ದೊಂದು ಬೆಳವಣಿಗೆ ನಡೆದಿದೆ.
ಲಂಬಾಣಿ, ಭೋವಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಆಗಿದೆ. ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರ ಈ ಅರ್ಜಿ ಹಾಕಿದ್ದಾರೆ.
ಲಂಬಾಣಿ, ಭೋವಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕುವ ಸಂಬಂಧ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸುಪ್ರೀಂಕೋರ್ಟ್ 2020ರಲ್ಲಿ ಸೂಚನೆ ನೀಡಿತ್ತು. ಅಲ್ಲದೆ ಜಾತಿಗಳನ್ನು ಎಸ್ಸಿಯಿಂದ ಕೈ ಬಿಡುವ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿತ್ತು. ಆದರೆ ಈ ವರೆಗೂ ರಾಜ್ಯ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಕಳಿಸಿಲ್ಲ.
ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಈ ಕುರಿತಂತೆ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಕೂಡ ನಡೆದಿದೆ. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಸೂಚನೆ ನೀಡಿದೆ.