ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ

Crime Logo
Published on

ಬೆಂಗಳೂರು: ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಣಿಪುರ ಮೂಲದ ನೊಂಗ್ಜೆಮಯುಮ್ ರುಷ್ದೆ ಅಹಮ್ಮದ್ ಷಾ(೨೨) ಮತ್ತು ವಿಲ್ಸನ್ ಗಾರ್ಡನ್‌ನ ಮಹಮ್ಮದ್ ಆಜಾದ್ ಖಾನ್(೨೩) ಬಂಧಿತರು. ಆರೋಪಿಗಳಿಂದ ೨.೮೦ ಲಕ್ಷ ರೂ. ಮೌಲ್ಯದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನವೊಂದು ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ ಗಲಭೆ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಅಹಮ್ಮದ್ ಷಾ ಮಣಿಪುರದಿಂದ ನಗರಕ್ಕೆ ಬಂದು ಕೆಲಸ ಹುಡುಕುತ್ತಿದ್ದ. ಈ ವೇಳೆ ವಿಲ್ಸನ್ ಗಾರ್ಡನ್‌ನ ಆಜಾದ್ ಖಾನ್ ಪರಿಚಯವಾಗಿದೆ. ಬಳಿಕ ಇಬ್ಬರು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ದ್ವಿಚಕ್ರ ವಾಹನ ಕಳ್ಳತನಕ್ಕೆ ಇಳಿದಿದ್ದರು. ಆರೋಪಿಗಳು ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಗುರಿಯಾಗಿಸಿ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಕದ್ದ ದ್ವಿಚಕ್ರ ವಾಹನಗಳನ್ನು ಪರಿಚಿತರ ಮೂಲಕ ವಿಲೇವಾರಿ ಮಾಡಿಸಿ ಹಣ ಪಡೆಯುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಗಳ ಬಂಧನದಿಂದ ವಿವೇಕನಗರ ಠಾಣೆಯ ಎರಡು ಹಾಗೂ ಕೋರಮಂಗಲ ಠಾಣೆಯ ಒಂದು ಸೇರಿ ಒಟ್ಟು ಮೂರು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net