

ಶಿವಮೊಗ್ಗ: ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಸೆಪ್ಟೆಂಬರ್ ಮೊದಲವಾರದಲ್ಲಿ ಅಂತ್ಯೋದಯ ಎಂಬ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಿಳಿಸಿದ್ದಾರೆ.
ಕಾರ್ಯಾಗಾರದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಜನಪ್ರತಿನಿಧಿಗಳಿಗೆ ವಿವಿಧ ಇಲಾಖೆಗಳ ಕಾರ್ಯವೈಖರಿ, ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಇದರ ಉದ್ಧೇಶವಾಗಿದೆ ಎಂದರು.
262 ಗ್ರಾಪಂಗಳ 2660 ಸದಸ್ಯರು, ನಗರ ಪಾಲಿಕೆ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ 230 ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಇಲಾಖೆಗಳು ಸಭಾಂಗಣದ ಹೊರ ಭಾಗದಲ್ಲಿ ಸ್ಟಾಲ್‌ಗಳನ್ನು ತೆರೆದು ಭಿತ್ತಿ ಪತ್ರ, ಕರಪತ್ರ ವಿತರಿಸಲಿದ್ದಾರೆ.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ಕಾರ್ಯವೈಖರಿ ಹಾಗೂ ಯೋಜನೆಗಳ ಬಗ್ಗೆ ಜನಪ್ರತಿನಿಧಿಗಳಿಗೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ್ ಅರಸ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಮುಂತಾದವುಗಳಲ್ಲಿ ದೊರೆಯುವ ಸಾಲ ಸೌಲಭ್ಯ, ಸಹಾಯಧನದ ಬಗ್ಗೆ ಮಾಹಿತಿ ನೀಡಬೇಕೆಂದು ಅರುಣ್ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಎಸ್ಪಿ ವಿಕ್ರಂ ಆಮ್ಟೆ ಸಭೆಯಲ್ಲಿದ್ದರು.