

ಬೆಂಗಳೂರು: ಸರ್ಕಾರ ಹಾಗೂ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಶ್ಲಾಘಿಸಿದರು.
ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ಸಚಿವರು, ಶಾಸಕರ ಮಧ್ಯೆ ಯಾವುದೇ ಭಿನ್ನಮತವಿಲ್ಲ. ಯಾವುದೇ ಶಾಸಕರಿಗೆ ಏನಾದರೂ ಹೇಳುವುದಿದ್ದರೆ, ವೈಯಕ್ತಿಕವಾಗಿ ನನ್ನ ಬಳಿ ಹೇಳಿಕೊಳ್ಳಬಹುದು. ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ತಾಕೀತು ಮಾಡಿದರು.
ಕರೊನಾ ಸಂಕಷ್ಟದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರಿಂದ ಹಿಡಿದು ಎಲ್ಲ ಸಚಿವರು ಹಗಲಿರುಳು ಎನ್ನದೇ ಚೆನ್ನಾಗಿ ಕಾರ್ಯನಿರ್ವಹಿಸಿದ್ದಾರೆ. ಕರೊನಾ ಸೋಂಕಿನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿ ನೀಡುವ ಯೋಜನೆ ದೇಶದಲ್ಲೇ ಪ್ರಥಮ ಎಂದು ಪ್ರಶಂಶಿಸಿದರು.