

ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಸುದ್ದಿ ಮೂಲಗಳ ಪ್ರಕಾರ ಭಾನುವಾರದಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ಗೆ ನೀಡಿರುವ ಸಮನ್ಸ್ನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಅವರನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಇನ್ನು ವಿಚಾರಣೆ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾತ್ರ ಇರುವ ಬಗ್ಗೆ ಸಾಕ್ಷ್ಯಾಧಾರಗಳು ದೊರೆತ್ತಿರುವ ಕಾರಣ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.
ಇನ್ನು ಅರವಿಂದ್ ಕೇಜ್ರಿವಾಲ್ಗೆ ಸಿಬಿಐ ಸಮನ್ಸ್ ಜಾರಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಎಎಪಿ ನಾಯಕ ಸಂಜಯ್ ಸಿಂಗ್ ದೆಹಲಿ ಸರ್ಕಾರ ಜಅರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದು ಕೇಂದ್ರ ಸರ್ಕಾರ ನಡೆಸುತ್ತಿರುವ ದ್ವೇಷ ರಾಜಕಾರಣದ ಫಲ.
ಈ ರೀತಿ ಆರೋಪ ಮಾಡುವುದು ಅಥವಾ ನಮ್ಮ ನಾಯಕರನ್ನು ಬಂಧಿಸುವುದರಿಂದ ಎಎಪಿ ಕಾರ್ಯಕರ್ತರು ಕುಗ್ಗುವುದಿಲ್ಲ. ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.