

ಬೆಂಗಳೂರು: ಮುಡಾ ಬದಲಿಯಾಗಿ ಹಂಚಿಕೆ ಮಾಡಿದ್ದ 14 ನಿವೇಶನಗಳನ್ನು ಪ್ರಾಧಿಕಾರಕ್ಕೆ ಹಿಂತಿರುಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪತ್ರ ಬರೆದು, ಹಸ್ತಾಂತರ ಮಾಡಿಕೊಳ್ಳಲು ಮುಡಾ ಆಯುಕ್ತರಿಗೆ ಕೋರಿದ್ದಾರೆ. ಈ ಬಗ್ಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ಛೇಡಿಸಿದ್ದಾರೆ.
ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿದ್ದಾರೆ.
ಮುಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನು ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಆರ್.ಅಶೋಕ್ ವ್ಯಾಖ್ಯಾನಿಸಿದ್ದಾರೆ.
'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ.
ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಆರ್.ಅಶೋಕ್ ಪುನರುಚ್ಚರಿಸಿದ್ದಾರೆ.