

ಮಡಿಕೇರಿ: ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಸುನ್ನಿ ಮೇಹಲ್‌ಲ್ ಫೆಡರೇಶನ್ ವತಿಯಿಂದ ನ೧೫ ರಿಂದ ೩೦ರ ವರೆಗೆ ಕೊಡಗಿನಲ್ಲಿ ಶಾಲಾ, ಕಾಲೇಜು ಸೇರಿದಂತೆ ಪ್ರತಿ ಗ್ರಾಮಗಳಲ್ಲೂ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಎಸ್.ಎಂ.ಎಫ್ ಜಿಲ್ಲಾಧ್ಯಕ್ಷ ಸಿ.ಎಂ.ಹಮೀದ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಯುವಕರನ್ನು, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಮಾಫಿಯ ದಂಧೆ ದೊಡ್ಡ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರ ವಿರುದ್ಧ ಸುನ್ನಿಮೇಹಲ್‌ಲ್ ಫೆಡರೇಶನ್ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ವೈದ್ಯರು, ಪೊಲೀಸ್ ಇಲಾಖೆಗಳ ಸಹಕಾರದೊಂದಿಗೆ ಹದಿನೈದು ದಿನಗಳ ಕಾಲ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದೆಂದು ಎಂದು ಮಾಹಿತಿ ನೀಡಿದರು.
ಜಾಗೃತಿ ಕಾರ್ಯಕ್ರಮಕ್ಕೆ ನ೧೫ ರಂದು ಸಿದ್ದಾಪುರದಲ್ಲಿ ಚಾಲನೆ ದೊರೆಯಲಿದ್ದು, ಶಾಲಾ, ಕಾಲೇಜು, ಮಸೀದಿ ಸೇರಿದಂತೆ ಪ್ರತಿ ಗ್ರಾಮಗಳಲ್ಲೂ ಮಾದಕ ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಲಾಗುವುದು. ಪೊಲೀಸ್ ಇಲಾಖೆ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜತೆಗೆ ದಂಧೆಕೊರಿಗೆ ಸಮಾಲೋಚನೆ ನಡೆಸಿ ಮುಂದೆ ಈ ರೀತಿಯ ಕೃತ್ಯಗಳಿಗೆ ಒಳಗಾದದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಫೆಡರೇಷನ್‌ನ ಉಪಾಧ್ಯಕ್ಷ ಕೆ.ಎ.ಯಾಕುಬ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕುಗೊಳಿಸಿ ಕೂಲಿ ಕಾರ್ಮಿಕರಾಗಿ ಪರಿವರ್ತನೆಗೊಳ್ಳುತ್ತಿದ್ದಾರೆ. ದೇಶದ ಭವಿಷ್ಯ ಕಟ್ಟಬೇಕಾದ ವಿದ್ಯಾರ್ಥಿಗಳು ದೇಶಕ್ಕೆ ಮಾರಕವಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳ ಹಿತ ದೃಷ್ಠಿಯಿಂದ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಅಬ್ದಲ್ ಕರೀಂ, ಖಜಾಂಚಿ ರಫೀಕ್, ಸದಸ್ಯ ಹಂಸ ಉಪಸ್ಥಿತರಿದ್ದರು.