

ಲಖನೌ: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಹಾಗೂ ಸುರ್ ವಿಧಾನಸಭಾ ಕ್ಷೇತ್ರದ ಶಾಸಕ ಅಜಂ ಖಾನ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2019ರ ಲೋಕಸಭೆ ಚುನಾವಣೆ ವೇಳೆ ಉತ್ತರಪ್ರದೇಶದ ರಾಮ್ಪುರದ ಧನೋರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯಾನಾಥ್ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಶಹಜಾದ್ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು FIR ಸಿದ್ದಪಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಾಲಯವು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ್ದು, ಎರಡು ವರ್ಷಗಳ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.
ಶುಕ್ರವಾರವಷ್ಟೇ ಅಜಂ ಖಾನ್ಗೆ ನೀಡಿದ ಭದ್ರತೆಯನ್ನು ಉತ್ತರಪ್ರದೇಶ ಸರ್ಕಾರ ಹಿಂಪಡೆದಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸದೃಢವಾಗಿ ಎದುರಿಸಲು ಸಜ್ಜಾಗುತ್ತಿರುವ ಸಮಾಜವಾದಿ ಪಕ್ಷಕ್ಕೆ ಅಜಂ ಖಾನ್ ವಿರುದ್ಧದ ತೀರ್ಪು ದೊಡ್ಡ ಹಿನ್ನಡೆಯಾಗಿದೆ.