ನೋಟಿಸ್‌ಗೆ ಬಗರ್‌ಹುಕುಂ ರೈತರು ಹೆದರಬೇಡಿ

bdvt (3)
ಭದ್ರಾವತಿ ಶಾಸಕರ ಗೃಹಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಗರ್‌ಹುಕುಂ ರೈತರನ್ನು ಉದ್ದೇಶಿಸಿ ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿದರು. ಸತ್ಯನಾರಾಯಣ, ಪರುಸಪ್ಪ ಕುರುಬರ, ಬಿ.ಕೆ ಮೋಹನ್ ಇತರರಿದ್ದರು.
Published on

ಭದ್ರಾವತಿ: ತಾಲೂಕಿನ ಬಗರ್ ಹುಕುಂ ಸಾಗುವಳಿದಾರರಿಗೆ ನೀಡಿರುವ ನೋಟಿಸ್ ಕುರಿತಂತೆ ಶಾಸಕ ಬಿ.ಕೆ.ಸಂಗಮೇಶ್ವರ್ ಶುಕ್ರವಾರ ರೈತರೊಂದಿಗೆ ಕಂದಾಯಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು.

ಶಾಸಕರ ಗೃಹಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಗರ್‌ಹುಕುಂ ರೈತರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆ ಅಧಿಕಾರಿಗಳು ನೀಡಿರುವ ನೋಟಿಸ್‌ಗೆ ಯಾವ ರೈತರೂ ಹೆದರುವ ಅಗತ್ಯವಿಲ್ಲ. ಈ ಕುರಿತು ಉಪವಿಭಾಗಾಧಿಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ನೋಟಿಸ್‌ನಿಂದ ನಿಮಗೆ ಯಾವುದೇ ತೊಂದರೆ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ನಿಮಗೇನಾದರೂ ತೊಂದರೆಯಾದರೆ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ. ನಮ್ಮ ಸರ್ಕಾರ ರೈತರ ಪರವಾಗಿದೆ. ತೊಂದರೆಯಾಗಲು ಬಿಡುವುದಿಲ್ಲ ಎಂದು ಅಭಯ ನೀಡಿದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್ ಮಾತನಾಡಿ, ರೈತರು ಹಾಗೂ ಗ್ರಾಮಸ್ಥರಲ್ಲಿ ಉಂಟಾಗಿರುವ ಆತಂಕ ದೂರ ಮಾಡುವ ಉದ್ದೇಶದಿಂದ ಶಾಸಕರು ನೇರವಾಗಿ ಸಭೆಯಲ್ಲಿ ಅಧಿಕಾರಿಗಳಿಂದಲೇ ಮಾಹಿತಿ ತಿಳಿಸುತ್ತಿದ್ದಾರೆ. ನಾವು ಎಂದಿಗೂ ರೈತರ ಪರವಾಗಿ ಇರುತ್ತೇವೆ. ಪಕ್ಷಾತೀತವಾಗಿ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಮಾತನಾಡಿ, ಸುಪ್ರೀಂ ಕೋರ್ಟ್ ಆದೇಶದಂತೆ ಅಗತ್ಯ ದಾಖಲಾತಿಗಳೊಂದಿಗೆ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ನೋಟಿಸ್ ನೀಡಲಾಗಿದೆ. ಬಗರ್‌ಹುಕುಂ ರೈತರು, ಗ್ರಾಮಸ್ಥರು ತಮ್ಮ ಬಳಿ ಇರುವ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಗೊಂದಲ ಬಗೆಹರಿಸಿಕೊಳ್ಳಬಹುದು. ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘನೆ ಕಂಡು ಬಂದಲ್ಲಿ ಮಾತ್ರ ಮುಂದಿನ ಕ್ರಮ ಕೈಗೊಳ್ಳುವ ಕುರಿತು ವರದಿ ನೀಡಲಾಗುವುದು ಎಂದರು.

ಉಪವಿಭಾಗಾಧಿಕಾರಿ ಸತ್ಯನಾರಾಯಣ, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ನಗರಸಭೆ ಸದಸ್ಯ ಬಿ.ಕೆ.ಮೋಹನ್, ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಸ್.ಮಣಿಶೇಖರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್, ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net