

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಸಂಬಂಧ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಆರೋಪದಡಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್.ಆರ್.ನವೀನ್ ಕುಮಾರ್, ಎನ್.ಕಾರ್ತಿಕ್, ಬಿ.ಸಿ. ಚೇತನ್ ಕುಮಾರ್ ಮತ್ತು ಎಚ್.ವಿ. ಪುಟ್ಟರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಅವುಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ರಜಾಕಾಲದ ಪೀಠ, ಪ್ರತಿವಾದಿಯಾಗಿರುವ ಹಾಸನದ ಸಿಇಎನ್ ಠಾಣಾ (ರಾಜ್ಯ ಸರ್ಕಾರ) ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.