

ಬೆಂಗಳೂರು: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಪ್ರಕರಣದಲ್ಲಿ ಬಂಧನವಾಗಿದ್ದ ಹಿಂದುಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಪುನೀತ್ ಕೆರೆಹಳ್ಳಿಗೆ ಜುಲೈ 27ರಂದು ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಜಾಮೀನು ಕೋರಿ ಪುನೀತ್ ಕೆರೆಹಳ್ಳಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು.
ದೇಶಬಿಟ್ಟು ಹೋಗಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಇಂತಹದ್ದೆ ಅಪರಾಧ ಕೃತ್ಯದಲ್ಲಿ ಭಾಗಿ ಆಗಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ. ರಾಜಸ್ಥಾನದಿಂದ ರೈಲಿನಲ್ಲಿ ಪ್ರಾಣಿ ಮಾಂಸ ಸರಬರಾಜು ಆಗುತ್ತಿದ್ದನ್ನು ಗಮನಿಸಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಡೆದು ಪ್ರತಿಭಟನೆ ನಡೆಸಿದ್ದರು. ಅಲ್ಲಿಗೆ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದರು ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದರು.