

ಢಾಕಾ: ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ರಾಷ್ಟ್ರದಲ್ಲಿ ಅತಿರೇಕದ ಹಿಂಸಾಚಾರ ಮುಂದುವರಿದಿರುವುದರಿಂದ ಬಾಂಗ್ಲಾದೇಶ ಸರ್ಕಾರವು ತೀವ್ರ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ.
ಹಿಂಸಾತ್ಮಕ ಘಟನೆಗಳನ್ನು ಹತ್ತಿಕ್ಕಲು ಬಾಂಗ್ಲಾದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಸೈನಿಕರು ಬೀದಿಗಳಲ್ಲಿ ಗಸ್ತು ತಿರುಗಲು ಪ್ರಾರಂಭಿಸಿದ್ದಾರೆ. ಕರ್ಫ್ಯೂ ಉಲ್ಲಂಘಿಸುವವರನ್ನು ಕಂಡರೆ ಗುಂಡು ಹಾರಿಸುವಂತೆ ಬಾಂಗ್ಲಾದೇಶ ಸರ್ಕಾರ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಈ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಇದುವರೆಗೆ 133 ಜನರು ಮೃತಪಟ್ಟಿದ್ದಾರೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ರಾಜತಾಂತ್ರಿಕ ಪ್ರವಾಸಕ್ಕೆ ತೆರಳಬೇಕಿತ್ತು. ಆದರೆ ದೇಶದಲ್ಲಿನ ಕೆಟ್ಟ ಪರಿಸ್ಥಿತಿಯಿಂದಾಗಿ ಅವರು ರಾಜತಾಂತ್ರಿಕ ಪ್ರವಾಸವನ್ನು ರದ್ದುಗೊಳಿಸಿದರು.
ಇಂಟರ್ನೆಟ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ತಿಳಿಸಿದ್ದಾರೆ. ಅಂದರೆ ದೇಶದಲ್ಲಿ ಸಂಪರ್ಕ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸರ್ಕಾರಿ ವೆಬ್‌ಸೈಟ್‌ಗಳು ಇನ್ನೂ ಆಫ್‌ಲೈನ್‌ನಲ್ಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ 8,000 ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 15,000 ಭಾರತೀಯ ನಾಗರಿಕರು ವಾಸಿಸುತ್ತಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಇತ್ತೀಚಿನ ಮಾಹಿತಿ ಪ್ರಕಾರ, ಬಾಂಗ್ಲಾದೇಶದಿಂದ ಒಂದು ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ವಿವಿಧ ಗಡಿಗಳ ಮೂಲಕ ಮತ್ತು ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ. ವಿದೇಶಾಂಗ ಸಚಿವ ಎಸ್.ಜೈಶಂಕರ್ ಕೂಡ ಈ ಕುರಿತು ಹೇಳಿಕೆ ನೀಡಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸುವುದಾಗಿ ಭರವಸೆ ನೀಡಿದ್ದಾರೆ. ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ತನ್ನ ನಾಗರಿಕರಿಗೆ ಅಮೆರಿಕ ಸಲಹೆ ಮತ್ತು ಎಚ್ಚರಿಕೆ ನೀಡಿದೆ.
1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಭಾಗಿಯಾಗಿರುವ ಕುಟುಂಬದ ಸದಸ್ಯರಿಗೆ ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ಕೊನೆಗೊಳಿಸಲು ಬೇಡಿಕೆಯಿದೆ. ಆದರೆ ಪ್ರಧಾನಿ ಶೇಖ್ ಹಸೀನಾ ಅವರು ಮೀಸಲಾತಿಯನ್ನು ಕೊನೆಗೊಳಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈ ಕಾರಣಕ್ಕಾಗಿ ಅಲ್ಲಿ ಪ್ರತಿಭಟನೆ ನಡೆಯುತ್ತಿದೆ.(ಏಜೆನ್ಸೀಸ್)