ಗ್ಯಾರಂಟಿ ಯೋಜನೆಯಿಂದ ಸರ್ಕಾರ ದಿವಾಳಿ

ಗ್ಯಾರಂಟಿ ಯೋಜನೆಯಿಂದ ಸರ್ಕಾರ ದಿವಾಳಿ
Published on

ನಂಜನಗೂಡು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದರು.

ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು, ಗ್ಯಾರಂಟಿ ಯೋಜನೆಗಳಿಗೆ 53 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಉದ್ಘಾಟನೆ ಮಾಡುವ ಮೂಲಕ ನಮ್ಮ ಅಭಿವೃದ್ಧಿ ಎನ್ನುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನಕ್ಕೆ ಕಡಿವಾಣ ಹಾಕಲಾಗಿದೆ. ಈ ಕುರಿತು ಧ್ವನಿ ಎತ್ತಬೇಕಾದವರು ಮೌನ ವಹಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ರೂ. ಹಗರಣದ ಬಗ್ಗೆ ಸಿ.ಎಂ.ಗೆ ಮನವರಿಕೆಯಾಗಿ ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಕೊಡಿಸಿದ್ದಾರೆ. ರಾಜ್ಯದ ಜನರು ಈಗಲಾದರೂ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು ಎಂದರು.

ನಂಜನಗೂಡಿನಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ. ಸ್ಥಳೀಯ ಶಾಸಕರ ನಿರ್ಲಕ್ಷೃದಿಂದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಬೆಳ್ಳಿ ರಥ, ವಸತಿಗೃಹಗಳ ಅಭಿವೃದ್ಧಿ, ನುಗು ಏತ ನೀರಾವರಿ ಯೋಜನೆ, ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಸೇರದಂತೆ ಇತರ ಅಭಿವೃದ್ಧಿ ಕೆಲಸಗಳು ಹಿಂದೆ ಉಳಿದಿವೆ. ನಮ್ಮ ಅವಧಿಯ ಅನುದಾನಕ್ಕೆ ಶಾಸಕರು ಭೂಮಿ ಪೂಜೆ ನೆರವೇರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಮಂಡಲ ಅಧ್ಯಕ್ಷ ಸಿದ್ದರಾಜು, ಆಶ್ರಯ ಸಮಿತಿ ಮಾಜಿ ಅಧ್ಯಕ್ಷ ಬಾಲಚಂದ್ರ, ನಗರಸಭೆ ಮಾಜಿ ಅಧ್ಯಕ್ಷ ಮಹಾದೇವಸ್ವಾಮಿ ಎನ್.ಸಿ.ಬಸವಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net