ಬನ್ನೂರನ್ನು ತಾಲೂಕು ಕೇಂದ್ರವಾಗಿ ಘೋಷಿಸಿ

Published on

ಬನ್ನೂರು: ಅಭಿವೃದ್ಧಿಯ ದೃಷ್ಟಿಯಿಂದ ಶೀಘ್ರವೇ ಬನ್ನೂರನ್ನು ತಾಲೂಕು ಕೇಂದ್ರವನ್ನಾಗಿ ರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕಾರ್ಯನಿಮಿತ್ತ ಬೆಂಗಳೂರಿನ ಕಡೆಗೆ ತಮ್ಮ ವಾಹನದಲ್ಲಿ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಸ್ಲಿಂ ಮುಖಂಡ ಜಮ್ರಾನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಬನ್ನೂರಿನ ಕಾವೇರಿ ವೃತ್ತದಲ್ಲಿ ಸ್ವಾಗತ ಕೋರಿ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಬನ್ನೂರು ತಾಲೂಕು ಕೇಂದ್ರವಾಗಿ ರೂಪುಗೊಳ್ಳುವಂತೆ ಮಾಡುವುದು ನಿಮ್ಮ ಜವಾಬ್ದಾರಿ. ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದರೆ ಬಹುಜನರ ಆಶೋತ್ತರಗಳು ಈಡೇರಿದಂತೆ ಆಗುತ್ತದೆ. ಅಲ್ಲದೆ ಬನ್ನೂರು ಹಾಗೂ ಸುತ್ತಮುತ್ತಲಿನ ಹಲವಾರು ಗ್ರಾಮಗಳಿಗೂ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದರು.

ಬನ್ನೂರಿನ ಮುಖ್ಯ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ವಾಹನಗಳ ಸುಗಮ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು. ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ನೀರು ಒದಗಿಸಲು ಮನವಿ ಮಾಡಿದರೆಲ್ಲದೇ ಹಿಂದುಳಿದ ವರ್ಗದ ಅಭಿವೃದ್ಧಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿದರು.

ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು, ಪುರಸಭಾ ಕಾಂಗ್ರೆಸ್ ಸದಸ್ಯರು, ಸಿದ್ದರಾಮಯ್ಯ ಅಭಿಮಾನಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net