

ಶಿವಮೊಗ್ಗ: ಬಸವನ ಬಾಗೇವಾಡಿಯಿಂದ ಆರಂಭವಾಗಿರುವ ಬಸವ ಸಂಸ್ಕೃತಿ ಅಭಿಯಾನ ಸೆ.17ರಂದು ಶಿವಮೊಗ್ಗ ನಗರಕ್ಕೆ ಆಗಮಿಸಲಿದೆ ಎಂದು ಅಭಿಯಾನದ ಅಧ್ಯಕ್ಷ, ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ ಹೇಳಿದರು.
ಅಭಿಯಾನವನ್ನು ಪುರಲೆ ಬಳಿ ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಬೆಳಗ್ಗೆ 11ಕ್ಕೆ ಡಿವಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಲಾಗಿದೆ. ಮಧ್ಯಾಹ್ನ 4ಕ್ಕೆ ಅಕ್ಕಮಹಾದೇವಿ ವೃತ್ತದಿಂದ ಕುವೆಂಪು ರಂಗಮಂದಿರದವರೆಗೆ ಪಾದಯಾತ್ರೆ ನಡೆಯಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕುವೆಂಪು ರಂಗಮಂದಿರದಲ್ಲಿ ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗದುಗಿನ ತೋಂಟದಾರ್ಯ ಮಠದ ಶ್ರೀ ತೋಂಟದ ಸಿದ್ದರಾಮ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಬಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟಾಧ್ಯಕ್ಷರು, ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೈಲೂರು ತೋಂಟಾದಾರ್ಯ ಮಠದ ಶ್ರೀ ನಿಜಗುಣ ಪ್ರಭು ತೋಂಟದಾರ್ಯ ಸ್ವಾಮೀಜಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಚಿತ್ರದುರ್ಗ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಅವರು ನಡೆ-ನುಡಿ ಸಿದ್ಧಾಂತ ಕುರಿತು ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅವರು ಶರಣರ ಕಾಯಕ ಸಂಸ್ಕೃತಿ ಕುರಿತು ಉಪನ್ಯಾಸ ನೀಡುವರು ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿರುವರು. ಪ್ರಕಾಶ್ ಗಿರಿಮಲ್ಲ ಅವರ ಬಸವ ತತ್ವ ಕೃತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಿಡುಗಡೆಗೊಳಿಸುವರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಶುಕಮುನಿ ಚಂದ್ರಶೇಖರ್ ಅವರ ‘ದಿವ್ಯತ್ರಯರು’ಕೃತಿ ಬಿಡುಗಡೆಗೊಳಿಸುವರು ಎಂದರು.
ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ, ಅಭಿಯಾನದ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಷಡಾಕ್ಷರಿ, ಖಜಾಂಜಿ ಪಿ.ರುದ್ರೇಶ್, ಮುಖಂಡರಾದ ಬಳ್ಳೇಕೆರೆ ಸಂತೋಷ್, ಚೇತನ್ ದುಮ್ಮಳ್ಳಿ, ರೇಣುಕಾರಾಧ್ಯ ಸುದ್ದಿಗೋಷ್ಠಿಯಲ್ಲಿದ್ದರು.