

ವಿಜಯಪುರ: ಕೇಂದ್ರದ 2023-24ನೇ ಸಾಲಿನ ಬಜೆಟ್ನಲ್ಲಿ ಕೃಷಿ ಕ್ಷೇತ್ರ ಮತ್ತು ರೈತರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಯುವಕರ ಉದ್ಯೋಗ, ಕೈಗಾರಿಕೆ, ರೈಲ್ವೇಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಮಾತನಾಡುತ್ತಾ, ಕೇಂದ್ರ ಬಜೆಜ್ ಮೂಲಕ ಸಬ್ ಕಾ ಸಾಥ್ - ಸಬ್ ಕಾ ವಿಕಾಸ್ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ನಿರೂಪಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ದೊಡ್ಡ ಕೊಡುಗೆಯನ್ನೇ ಕೊಟ್ಟಿದ್ದಾರೆ ಎಂದು ಹೇಳಿದರು.
ಬಜೆಟ್ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಘೋಷಣೆ ಮಾಡಿರುವ ಬಗ್ಗೆ ಸಂತಸ ವ್ಯಕ್ತ ಪಡಿಸಿ, ಇದು ರಾಜ್ಯದ ಪ್ರಮುಖ ನೀರಾವರಿ ಯೋಜನೆಯಾಗಿದೆ. ಇದನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವಂತೆ ಈ ಮೊದಲೇ ಪ್ರಸ್ತಾವನೆ ಸಲ್ಲಿಸಿದ್ದೆವು. ಹೀಗಾಗಿ 5300 ಕೋಟಿ ರೂ. ನೀಡಿರುವುದು ಸ್ವಾಗತಾರ್ಹ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದೆ ಎಂದು ಬೊಮ್ಮಾಯಿ ಹೇಳಿದರು.