

ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಹೋಬಳಿಯ ರಾಜಾರಾಂಪುರ ಹಾಗೂ ಮಾಯಣ್ಣನಕೊಪ್ಪಲು ಗ್ರಾಮದಲ್ಲಿ ಶುಕ್ರವಾರ ಶ್ರೀ ದಕ್ಷಿಣಮುಖ ಉದ್ಭವಮೂರ್ತಿ ಬಸವೇಶ್ವರ ದೇವಾಲಯವನ್ನು ಉದ್ಘಾಟಿಸಲಾಯಿತು.
ಹೊಸದಾಗಿ ಜೀರ್ಣೋದ್ಧಾರಗೊಂಡ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ, ಹವನ, ಕಳಸಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಾನಗಳು ನಡೆದವು. ದೇವಸ್ಥಾನದಲ್ಲಿ ಭಕ್ತರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ದೊಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕ ಎ.ಮಂಜು, ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಪಾಲ್ಗೊಂಡಿದ್ದರು.