ಬಿಬಿಎಂಪಿ ಅಗ್ನಿ ದುರಂತ ಗಾಯಾಳುಗಳ ಆರೋಗ್ಯ ಸ್ಥಿರ

Victoria hospital - 1
Published on
  • ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ‘ಗುಣ ನಿಯಂತ್ರಣ ಪ್ರಯೋಗಾಲಯ’ದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಒಂಬತ್ತು ಬಂದಿ ಆರೋಗ್ಯ ಸ್ಥಿರವಾಗಿದ್ದು, ಎಲ್ಲರೂ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿನ ಎಮರ್ಜೆನ್ಸಿ ಟ್ರಾಮಾ ಕೇರ್ ಸೆಂಟರ್‌ನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, 24 ರಿಂದ 48 ಗಂಟೆಗಳ ನಿಗಾ ವಹಿಸಲಾಗಿದೆ. ಸದ್ಯಕ್ಕೆ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಇಲ್ಲ. ಆದರೆ ಗುಣ ಹೊಂದಲು ಸಮಯ ಬೇಕಾಗುತ್ತದೆ. ನಂತರ ಗಾಯಾಳುಗಳ ದೇಹದ ಸುಟ್ಟ ಭಾಗಗಳಿಗೆ ಅಗತ್ಯತೆ ಆಧರಿಸಿ ಚರ್ಮ ಕಸಿ (ಪ್ಲಾಸ್ಟಿಕ್ ಸರ್ಜರಿ) ಮಾಡಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಕುಟುಂಬದವರಿಗೆ ಸಾಂತ್ವಾನ: ಶನಿವಾರ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಅವರ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆ ಕುರಿತು ಮಾಹಿತಿ ಪಡೆದರು. ಈ ವೇಳೆ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಗಾಯಗೊಂಡ ಎಲ್ಲ ಒಂಬತ್ತು ಜನರ ಆರೋಗ್ಯದಲ್ಲೂ ಚೇತರಿಕೆ ಕಂಡು ಬಂದಿದ್ದು, ಗುಣ ಹೊಂದಲು ಸಮಯ ಬೇಕಾಗುತ್ತದೆ. ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳಿದ್ದು, ವೈದ್ಯರು ವಿಶೇಷ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಚಿಕಿತ್ಸೆ ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಗಾಯಾಳುಗಳ ಕುಟುಂಬದ ಸದಸ್ಯರಿಗೆ ಧೈರ್ಯ ಹೇಳಿದರು.

ಘಟನೆ ಕುರಿತು ತನಿಖೆ: ಈ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಘಟನೆ ಕುರಿತು ತನಿಖೆ ನಡೆಯುತ್ತಿದೆ. ಈ ರೀತಿಯ ಘಟನೆಗಳು ಆಗುವ ಸಾಧ್ಯತೆಗಳನ್ನು ಆಧರಿಸಿ ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕಿತ್ತು. ಮುಂದಿನ ದಿನಗಳಲ್ಲಿ ಇಂತಹ ಸ್ಥಿತಿ ಮರುಕಳಿಸದಂತೆ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲು ಆ್ಯಂಬುಲೆನ್ಸ್ ವಿಳಂಬ ಆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ತುರ್ತು ಆ್ಯಂಬುಲೆನ್ಸ್ ಸೇವೆ ಒದಗಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net