

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಸಚಿವ, '' ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು'' ಎಂದಿದ್ದಾರೆ.
ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.