ಭಾಸ್ಕರ್ ರಾವ್ ಸ್ವಯಂ ನಿವೃತ್ತಿ; ಅರ್ಜಿ ಅಂಗೀಕರಿಸಿದ ಕೇಂದ್ರ ಸರ್ಕಾರ

Bhaskar Rao
Published on

ಬೆಂಗಳೂರು: ರೈಲ್ವೆ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. 2021 ಸೆಪ್ಟೆಂಬರ್‌ನಲ್ಲಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಅದನ್ನು ಕೂಡಲೇ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ಕಳೆದ 7 ತಿಂಗಳಿಂದ ಕೇಂದ್ರ ಅದಕ್ಕೆ ಸಮ್ಮತಿ ನೀಡಿರಲಿಲ್ಲ. ಇದೀಗ ಅನುಮೋದನೆ ನೀಡಿದೆ.

1954ರಲ್ಲಿ ಜನಿಸಿದ ಭಾಸ್ಕರ್ ರಾವ್ 1990ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. 2019-20ರ ಅವಧಿಯಲ್ಲಿ ಬೆಂಗಳೂರು ನಗರದ ಪೊಲೀಸ್ ಆಯಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗ ಸೇರಿ ವಿವಿಧೆಡೆ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಜನಸ್ನೇಹಿ ಆಯುಕ್ತರೆನಿಸಿದ್ದರು. ಹಲವಾರು ಅಪರಾಧ ಪ್ರಕರಣಗಳನ್ನು ಭೇದಿಸಿ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಭಾಸ್ಕರ್ ರಾವ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net