

ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ.ನಾಗರಾಜಪ್ಪ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಇಡಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಹಲವು ಮಹತ್ವದ ದಾಖಲೆಗಳು ಪತ್ತೆಯಾಗಿದ್ದವು, ಅಲ್ಲದೇ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣ ಇಡಿ ಅಧಿಕಾರಿಗಳು ನಾಗರಾಜಪ್ಪನನ್ನು ಬಂಧಿಸಿ ನಗರದ ೧ ನೇ ಸಿಸಿಎಚ್ ಕೋರ್ಟ್ ಮುಂದೆ ಹಾಜರು ಪಡಿಸಿ ೭ ದಿನಗಳ ಕಾಲ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡು ಅವ್ಯವಹಾರ ನಡೆಸಲಾಗಿತ್ತು. ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಶುಕ್ರವಾರ ಇಡಿ ಅಧಿಕಾರಿಗಳು ಮಾಜಿ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ, ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲೀಲಾವತಿ ಮತ್ತು ಅಧೀಕ್ಷಕರಾಗಿದ್ದ ಪಿ.ಡಿ.ಸುಬ್ಬಪ್ಪಅವರ ಸೇರಿದ ೧೦ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ಬ್ಯಾಂಕ್ ಖಾತೆಗಳ ವಿವರ, ಸ್ಥಿರಾಸ್ತಿ-ಚರಾಸ್ತಿಗಳು, ಸಂಬಂಧಿಕರ ಹೆಸರಿನಲ್ಲಿ ಸಂಪಾದನೆ ಮಾಡಿದ್ದ ಆಸ್ತಿ ಮತ್ತಿತರ ದಾಖಲೆಗಳು ಲಭ್ಯವಾಗಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ ವೇಳೆ ಸರಿಯಾದ ಮಾಹಿತಿ ನೀಡದ ಕಾರಣ ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.